ಮಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದ್ದಾರೆ.ಸುಮಾರು 22.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕನಸುಗಳನ್ನು ಹೊತ್ತು ಅಪಾರ ಪರಿಶ್ರಮದೊಂದಿಗೆ ಪರೀಕ್ಷೆಯನ್ನು ಬರೆದಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯವೇ ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದ್ದು, ಅವರ ಕನಸು ನುಚ್ಚುನೂರಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಆಡಳಿತ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ಅನಿಶ್ಚಿತತೆಯೊಳಗೆ ಸಿಲುಕಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ತ್ಯಾಗ ಹಾಗೂ ಶಿಕ್ಷಣದ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಇಂತಹ ಗಂಭೀರ ಲೋಪದೋಷಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜಿನಾಮೆ ನೀಡಬೇಕು. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಹಗರಣಗಳು ಪದೇ ಪದೇ ನಡೆಯುತ್ತಿದ್ದರೂ, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರದ ಸಚಿವರು ವಿಫಲರಾಗಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾವುದೇ ವ್ಯವಸ್ಥೆಯನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಗರಣದ ಹಿಂದೆ ಇರುವ ದೋಷಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಶಿಕ್ಷಣ ವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ: ಹರೀಶ್ ಕುಮಾರ್
ಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆ ರದ್ದುಗೊಂಡಿರುವ ಘಟನೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಇದು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.