ಕನ್ನಡಪ್ರಭ ವಾರ್ತೆ ತುಮಕೂರು2026ರ ನೀಟ್ ಮರು ಪರೀಕ್ಷೆಯನ್ನು 21 ರಂದು ನಿಗದಿಯಾಗಿದ್ದು, ಜಿಲ್ಲೆಯ ವಿವಿಧ 13 ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸಿದ್ಧತೆ ಹಾಗೂ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯು ರಾಷ್ಟ್ರ ಮಟ್ಟದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಲೋಪಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಏರ್‌ಫೋರ್ಸ್ ಭದ್ರತೆಯಲ್ಲಿ ತರಲಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು. ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಶ್ನೆಪತ್ರಿಕೆ ಸೋರಿಕೆ ಮುಂತಾದ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಸೇರಿದಂತೆ ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆಯ ಮೇಲೂ ನಿಯಂತ್ರಣ ಹೇರಲಾಗಿದೆ ಎಂದು ತಿಳಿಸಿದರು.ಪರೀಕ್ಷಾ ದಿನದಂದು ಎಲ್ಲಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಕಡ್ಡಾಯವಾಗಿ ಒದಗಿಸಬೇಕು. ಯಾವುದೇ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಸಜ್ಜುಗೊಳಿಸಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನಗರ ಸಾರಿಗೆ ವ್ಯವಸ್ಥೆ, ವಿಶೇಷವಾಗಿ ಸಿಟಿ ಬಸ್ ಸೌಲಭ್ಯವನ್ನು ಸೂಕ್ತವಾಗಿ ಕಲ್ಪಿಸುವಂತೆ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದರು. ಪ್ರಶ್ನೆಪತ್ರಿಕೆಗಳ ಸಾಗಣೆ, ಸಂರಕ್ಷಣೆ ಹಾಗೂ ವಿತರಣೆಯ ಎಲ್ಲಾ ಹಂತಗಳಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿವಹಿಸಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಯ ನಿಷ್ಠೆ ಹಾಗೂ ಗೌಪ್ಯತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಯಾವುದೇ ರೀತಿಯ ಅಸಮರ್ಪಕತೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಈ ಬಾರಿ ತುಮಕೂರು ನಗರದಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ 5,329 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದರು. ಪರೀಕ್ಷೆಯ ನಗರ ಸಂಯೋಜಕ ಮನೀಶ್ ಸಾಣೆ , ಪರೀಕ್ಷಾ ಪೂರ್ವ ಸಿದ್ಧತೆಗಳು, ಕೇಂದ್ರ ಅಧೀಕ್ಷಕರ ಜವಾಬ್ದಾರಿಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು. ಪರೀಕ್ಷೆಯ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸುವ ಮೂಲಕ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಯುವಂತೆ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ್ ಸೇರಿದಂತೆ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ನೀಟ್ ಮರು ಪರೀಕ್ಷೆ: ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರ
2026ರ ನೀಟ್ ಮರು ಪರೀಕ್ಷೆಯನ್ನು 21 ರಂದು ನಿಗದಿಯಾಗಿದ್ದು, ಜಿಲ್ಲೆಯ ವಿವಿಧ 13 ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸಿದ್ಧತೆ ಹಾಗೂ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.