ಹಗರಿಬೊಮ್ಮನಹಳ್ಳಿ: ನೀಟ್ ಪರೀಕ್ಷೆಗಳ ಅವಾಂತರದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರ ರಾಜೀನಾಮೆ ಮತ್ತು ಸಾವಿಗೀಡಾಗಿರುವ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಕೈಗೊಂಡಿರುವ ಆಮರಣಾಂತಿಕ ಉಪವಾಸ ಸತ್ಯಾಗ್ರಹವನ್ನು ನಿರ್ಲಕ್ಷಿಸಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸೌಹಾರ್ದ ಕರ್ನಾಟಕ ವೇದಿಕೆಯಿಂದ ಶನಿವಾರ ಆಕ್ರೋಶ ವ್ಯಕ್ತವಾಗಿದೆ.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವೇದಿಕೆಯ ಪದಾಧಿಕಾರಿಗಳು, ಇಲ್ಲಿನ ವಿದ್ಯಾರ್ಥಿಗಳ ಸಹಯೋಗದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದರಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಐಟಿಯು ಮುಖಂಡ ಎಸ್.ಜಗನ್ನಾಥ್ ಮಾತನಾಡಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳ ಭವಿಷ್ಯವೇ ಡೋಲಾಯಮಾನವಾಗಿದೆ. ದೇಶದಲ್ಲಿ ೧೭ ವಿದ್ಯಾರ್ಥಿಗಳು ಆತ್ಮ,ಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಮೌನ ದೇಶದ ಶೈಕ್ಷಣಿಕ ರಂಗದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಅಧಃಪತನ ಖಂಡಿಸಿ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಳೆದ ೨೦ ದಿನಗಳಿಂದ ಪ್ರಜಾಸತ್ತಾತ್ಮಕ ರೀತಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸೌಜನ್ಯಕ್ಕಾದರೂ ಮಾತುಕತೆ ನಡೆಸದ ಕೇಂದ್ರ ಸರ್ಕಾರಕ್ಕೆ ಕನಿಷ್ಠ ಮಾನವೀಯತೆಯೂ ಇಲ್ಲದ ಭಂಡತನ ಪ್ರದರ್ಶಿಸಿದೆ ಎಂದು ಕಿಡಿಕಾರಿದರು.ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳು ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಉಪವಾಸ ನಿರತ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯದ ಹೊಣೆ ಕೇಂದ್ರ ಸರ್ಕಾರದ ಮೇಲೆ ಇದೆ ಎಂದು ಚಾಟಿ ಬೀಸಿದೆ ಎಂದರು.
ಮುಖಂಡೆ ಬಿ.ಮಾಳಮ್ಮ ಮಾತನಾಡಿ, ಕೂಡಲೇ ಕೇಂದ್ರ ಸರ್ಕಾರ ಉಪವಾಸ ನಿರತ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ತಪಾಸಣೆ ನಡೆಸಿ ಅವರ ಉಪವಾಸ ಸತ್ಯಾಗ್ರಹ ನಿಲ್ಲಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಒಂದು ಕೋಟಿ ರು. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಮುಖಂಡ ಆರ್.ಎಸ್.ಬಸವರಾಜ್, ಎಸ್.ಎಫ್.ಐ.ನ ಜಯಸೂರ್ಯ, ಕೆ.ಗಾಳೆಪ್ಪ, ಕೆ.ರಮೇಶ್, ಪಿ.ಚಾಂದಬೀ ಹಾಗೂ ಸೈಯದ್ ಇರ್ಫಾನ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.