ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ)ಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು. ಗಾಂಧಿಪುರ ಸರ್ಕಾರಿ ಪದವಿ ಕಾಲೇಜು ಗಾಂಧಿಪುರ ಹಾಗೂ ನಗರದ ಜಿ.ಎಚ್. ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿ, ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ಅವರು ಪರೀಕ್ಷಾ ಕೊಠಡಿಗಳು, ಅಭ್ಯರ್ಥಿಗಳ ಆಸನ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ರಾಷ್ಟ್ರೀಯ ಮಟ್ಟದ ಮಹತ್ವದ ಪರೀಕ್ಷೆಯಾಗಿರುವುದರಿಂದ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವುದರ ಜೊತೆಗೆ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ತಿಳಿಸಿದರು.ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.ಅಭ್ಯರ್ಥಿಗಳ ಪರಿಶೀಲನೆ, ಪ್ರವೇಶ ದ್ವಾರಗಳ ನಿರ್ವಹಣೆ ಹಾಗೂ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷೆಯು ಯಾವುದೇ ಅಡಚಣೆ ಇಲ್ಲದೆ ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರ ನೀಡಿದರು. ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ನೀಟ್ ಯಶಸ್ವಿಯಾಗಿ ನಡೆಸಲು ಸಮರ್ಪಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಹಾಗೂ ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.