ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ಜಿಲ್ಲೆಯ ಐದು ಕೇಂದ್ರಗಳಲ್ಲಿ ರಾಷ್ಟ್ಯೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-2026) ಮೇ 3 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಡೆಸ್ಕ್, ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆಯ ತಾಪ ಹೆಚ್ಚಿರುವುದರಿಂದ ಪರೀಕ್ಷೆಯ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಯಾವುದೇ ಸಿಬ್ಬಂದಿ ಗೈರು ಹಾಜರಾದಲ್ಲಿ ಅಥವಾ ಕರ್ತವ್ಯದಲ್ಲಿ ಲೋಪವೆಸಗಿದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿಯಮಗಳಂತೆ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಪಠ್ಯ ವಿಷಯಗಳು, ಕಾಗದದ ಚೂರುಗಳು, ಜ್ಯಾಮಿತಿಯ ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ರೈಟಿಂಗ್ ಪ್ಯಾಡ್, ಪೆನ್ ಡ್ರೈವ್‌, ಎರೇಸರ್, ಲಾಗ್ ಟೇಬಲ್, ಎಲೆಕ್ಟ್ರಾನಿಕ್ ಪೆನ್ , ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್‌ಗಳು, ಮೈಕ್ರೋಫೋನ್, ಪೇಜರ್, ಹೆಲ್ತ್ ಬ್ಯಾಂಡ್, ಗಾಗಲ್ಸ್, ಹ್ಯಾಂಡ್ ಬ್ಯಾಗ್‌ಗಳು, ಬೆಲ್ಟ್, ಕ್ಯಾಪ್ ಯಾವುದೇ ರೀತಿಯ ವಾಚ್ ಮನಿಕಟ್ಟು ಗಡಿಯಾರ, ಬಳೆಗಳು, ಕ್ಯಾಮೆರಾ ಮತ್ತು ಯಾವುದೇ ಆಭರಣಗಳು. ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನಗಳಂತಹ ಸಂವಹನ ಸಾಧನಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದರು.

ಪರೀಕ್ಷಾ ದಿನದಂದು ಓಎಂಆರ್ ಭರ್ತಿ ಮಾಡಲು, ಉತ್ತರಗಳನ್ನು ತುಂಬಲು ವಿದ್ಯಾಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದ ಕಪ್ಪು ಬಾಲ್ ಪೆನ್ ನೀಡಲಾಗುವುದು. ವಿದ್ಯಾರ್ಥಿಗಳು ಈ ಪೆನ್ ಮಾತ್ರ ಬಳಸಬೇಕು. ಬೇರೆ ಯಾವುದೆ ರೀತಿಯ ಜೆಲ್ ಪೆನ್ ಬಳಕೆಗೆ ಅವಕಾಶವಿಲ್ಲ. ಒಂದು ವೇಳೆ ಈ ವಸ್ತುಗಳು ಅಭ್ಯರ್ಥಿಯ ಬಳಿ ಕಂಡುಬಂದಲ್ಲಿ, ಅದನ್ನು ‘ಅಕ್ರಮ ಮಾರ್ಗಗಳ ಬಳಕೆ’ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


5 ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳು ನಿಷೇಧಾಜ್ಞೆ ಸಮಯದಲ್ಲಿ ಕಾರ್ಯನಿರ್ವಹಿಸುವಂತಿಲ್ಲ ಎಂದರು.

ನೀಟ್ ಪರೀಕ್ಷೆ ನೋಡಲ್ ಅಧಿಕಾರಿ ನಾಗಭೂಷಣ್ ಮಾತನಾಡಿ, ಜಿಲ್ಲೆಯಲ್ಲಿ ಚಿತ್ರದುರ್ಗ 3 ಮತ್ತು ಚಳ್ಳಕೆರೆ 2 ಸೇರಿ ಒಟ್ಟು 5 ಪರೀಕ್ಷಾ ಕೇಂದ್ರಗಳಿವೆ. 2,835 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ, ಸಮಾಜ ಕಲ್ಯಾಣ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಎಚ್.ದಿವಾಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಜರಿದ್ದರು.