ಸಾರಾಂಶ
-ನೀಟ್ ಯುಜಿ -25 ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ
----ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯಿಂದ ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರಾನ್ಸ್ ಟೆಸ್ಟ್ (ನೀಟ್, ಯುಜಿ-25) ಪರೀಕ್ಷೆಯನ್ನು ನಗರದಲ್ಲಿ ಮೇ 4ರಂದು ನಡೆಸಲಾಗುತ್ತಿದ್ದು, ಶಾಂತಿಯುತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ನೀಟ್ ಯುಜಿ -25 ಪರೀಕ್ಷೆ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 20 ಮೀ. ವರೆಗೆ ಪರೀಕ್ಷಾ ದಿನದಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ಪ್ರತಿಬಂಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್, ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರ ಸಮರ್ಪಕವಾಗಿ ಸಮಯ ತೋರುವಂತೆ ನೋಡಿಕೊಳ್ಳಬೇಕು. ಸೂಕ್ತ ಆಸನದ ವ್ಯವಸ್ಥೆ, ಕುಡಿವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಪರೀಕ್ಷೆ ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ಪರೀಕ್ಷಾ ಮಾರ್ಗಸೂಚಿಯನ್ನು ವಿವರಿಸಿದರು.ಸಭೆಯಲ್ಲಿ ಎಎಸ್‌ಪಿ ಕಾರ್ಯಪ್ಪ, ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷಾ ಸಂಯೋಜಕ ಸುಬ್ರಹ್ಮಣ್ಯ ಶರ್ಮ, ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ನಿಯೋಜಿತ ಅಧಿಕಾರಿಗಳು ಪಾಲ್ಗೊಂಡಿದ್ದರು.
--ಪೋಟೋ: ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ನೀಟ್ ಯುಜಿ -25 ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧ ಲಿಂಗ ರೆಡ್ಡಿ ಮಾತನಾಡಿದರು.
02ಎಸ್‌ಎಂಜಿಕೆಪಿ02