ಸಮೃದ್ಧ ಸಂಪನ್ಮೂಲ ಹೊಂದಿರುವ ವಿಜಯನಗರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ.
ಹೊಸಪೇಟೆ: ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜತೆಗೆ ವಿವಿಧ ಇಲಾಖೆಗಳಲ್ಲಿನ ಲೋಪದೋಷ ಸರಿಪಡಿಸಿ ಸಾರ್ವಜನಿಕರಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಇಲಾಖೆ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಪ್ರಕರಣಗಳು ವರದಿಯಾಗದಿದ್ದರೂ ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಮಹಿಳಾ ಸ್ಪಂದನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮೃದ್ಧ ಸಂಪನ್ಮೂಲ ಹೊಂದಿರುವ ವಿಜಯನಗರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ಯಾವುದೇ ರೀತಿಯ ಸಮಸ್ಯೆ ಅಥವಾ ಲೋಪದೋಷ ಕಂಡುಬಂದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದ್ದು, ಈ ದುರ್ವ್ಯವಸ್ಥೆಗೆ ಕಡಿವಾಣ ಹಾಕಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗಡಿ ಭಾಗ ಹಾಗೂ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಶೀಘ್ರ ಸ್ಥಳಾಂತರಿಸಿ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಎಷ್ಟು ಕಾಲಾವಕಾಶ ಬೇಕಾಗುತ್ತದೆ ಎಂಬುದರ ಕುರಿತು ಮಾಹಿತಿ ಪಡೆದರು.ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಣಿ ಬಾಧಿತ ಪ್ರದೇಶಗಳ ಜನರಿಗೆ ಯಾವುದೇ ಆರೋಗ್ಯ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ತಿಂಗಳಿಗೆ ಸುಮಾರು 400ರಿಂದ 500 ಹೆರಿಗೆ ನಡೆಯುವ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡುವುದು ಅಗತ್ಯ. ಆದರೆ ಆಸ್ಪತ್ರೆಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬರುತ್ತಿರುವುದು ಬೇಸರದ ಸಂಗತಿ. ಅಲ್ಲದೆ, ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಬೇಕು ಎಂದು ನಿರ್ದೇಶನ ನೀಡಿದರು.ಹಂಪಿ ವಿಶ್ವವಿದ್ಯಾಲಯದ ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಅಲ್ಲಿನ ಅವ್ಯವಸ್ಥೆ ಕಂಡು ಮನಸ್ಸಿಗೆ ನೋವಾಗಿದೆ. ಇಂತಹ ಸಮಸ್ಯೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಹಂಪಿ ವ್ಯಾಪ್ತಿಯಲ್ಲಿ ಸುಮಾರು 270 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದರೂ ಅವುಗಳಲ್ಲಿ ಬಹುತೇಕವು ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಕ್ಯಾಮೆರಾ ಪರಿಶೀಲಿಸಿ ದುರಸ್ತಿಗೊಳಿಸುವುದರ ಜತೆಗೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.ಸಂಚಾರಿ ಕುರಿಗಾಹಿಗಳಿಗೆ ದೊರೆಯಬೇಕಾದ ಅಗತ್ಯ ಔಷಧಿ, ಗುರುತಿನ ಚೀಟಿಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಗಂಭೀರ ಆರೋಪ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುರಿಗಾಹಿಗಳ ಸಮಸ್ಯೆ ತಕ್ಷಣ ಪರಿಹರಿಸಿ ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯ ವಿಳಂಬವಿಲ್ಲದೆ ಒದಗಿಸಬೇಕು.
ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರಿಗೆ ಸರ್ಕಾರದ ವಿವಿಧ ಯೋಜನೆ ಹಾಗೂ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವ್ಯಾಪಕ ದೂರುಗಳಿವೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯ ತಲುಪಿಸುವಲ್ಲಿ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಾಕೀತು ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಅಧಿಕಾರಿಗಳು, ಹೊಸಪೇಟೆ ತಾಲೂಕಿನಲ್ಲಿ ಮೂರು ಎಕರೆ ಜಾಗ ಗುರುತಿಸಲಾಗಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಪಂ ಸಿಇಓ ಗರಿಮಾ ಪನ್ವಾರ್, ಎಸ್ಪಿ ಎಸ್. ಜಾಹ್ನವಿ, ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಉಪವಿಭಾಗಾಧಿಕಾರಿ ಕವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಇದ್ದರು.