ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಸಹಭಾಗಿತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಸುಮಾರು 750 ಕೋಟಿ ರು. ವೆಚ್ಚದಲ್ಲಿ ಮನೆ ಮನೆಗೂ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಗುತ್ತಿಗೆದಾರರು ಹಾಗೂ ಕೆಲ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳದೇ ಗ್ರಾಮೀಣ ಪ್ರದೇಶದ ಜನರು ಶುದ್ಧ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಗ್ರಾಮೀಣ ನೀರು ಸರಬರಾಜು ಇಲಾಖೆ ಅಭಿಯಂತರ ರಂಗಸ್ವಾಮಿ ಸ್ಪಷ್ಟನೆ ನೀಡಬೇಕೆಂದು ಶಾಸಕರು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಿದ್ದು, ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟ ಸಂದೇಶ ನೀಡಿದರು.

ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಜನತೆಯ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಸರ್ಕಾರದ ಆದೇಶದಂತೆ ಜನಸಂಪರ್ಕ ಸಭೆಗಳನ್ನು ಗ್ರಾಮ ಮಟ್ಟದಲ್ಲೇ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಯುಕ್ತ ಸಹಭಾಗಿತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಸುಮಾರು 750 ಕೋಟಿ ರು. ವೆಚ್ಚದಲ್ಲಿ ಮನೆ ಮನೆಗೂ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಜಾರಿಗೆ ತರಲಾಗಿದೆ. ಆದರೆ, ಗುತ್ತಿಗೆದಾರರು ಹಾಗೂ ಕೆಲ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳದೇ ಗ್ರಾಮೀಣ ಪ್ರದೇಶದ ಜನರು ಶುದ್ಧ ಕುಡಿಯುವ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೆಲವು ಗ್ರಾಮ ಪಂಚಾಯಿತಿಗಳ ಪಿಡಿಒಗಳು ಯೋಜನೆ ಪೂರ್ಣಗೊಂಡಿದೆ ಎಂಬಂತೆ ಲಿಖಿತ ಒಪ್ಪಿಗೆ ಪತ್ರ ನೀಡಿರುವುದು ಆಶ್ಚರ್ಯಕರ ಸಂಗತಿಯಾಗಿದ್ದು, ಈ ಸಂಬಂಧ ಗ್ರಾಮೀಣ ನೀರು ಸರಬರಾಜು ಇಲಾಖೆ ಅಭಿಯಂತರ ರಂಗಸ್ವಾಮಿ ಸ್ಪಷ್ಟನೆ ನೀಡಬೇಕೆಂದು ಶಾಸಕರು ಸೂಚಿಸಿದರು.ಇದಕ್ಕೆ ಉತ್ತರಿಸಿದ ಅಭಿಯಂತರ ರಂಗಸ್ವಾಮಿ, ಕೆಂಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ಗುತ್ತಿಗೆ ಪಡೆದಿದ್ದ ಸಿದ್ದಪ್ಪ ಎಂಬ ಗುತ್ತಿಗೆದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಗುತ್ತಿಗೆ ರದ್ದುಪಡಿಸಲಾಗಿದ್ದು, ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು. ಇನ್ನು ಎಂಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಬಾಕಿ ಉಳಿದಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಅಭಿಯಂತರರ ಉತ್ತರದಿಂದ ಅಸಮಾಧಾನಗೊಂಡ ಶಾಸಕರು, ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು.ಸಭೆಯಲ್ಲಿ ಕೆಲವರು ಮನೆಗಳಿದ್ದರೂ ಇ-ಖಾತೆ ನೀಡಲಾಗುತ್ತಿಲ್ಲ ಎಂದು ದೂರಿದಾಗ, ಸ್ಥಳದಲ್ಲಿದ್ದ ಸರ್ವೆ, ರೆವಿನ್ಯೂ ಮತ್ತು ಪಂಚಾಯಿತಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಕುಳಿತು ಡಿಜಿಟಲ್ ಸಮಸ್ಯೆಗಳನ್ನು ಪರಿಹರಿಸಿ ಖಾತೆ ಮಾಡಿಕೊಡುವಂತೆ ನಿರ್ದೇಶನ ನೀಡಿದರು.ಸ್ಮಶಾನ ಜಾಗದ ಕುರಿತಾದ ಗೊಂದಲವನ್ನು ಸಭೆಯ ಗಮನಕ್ಕೆ ತಂದಾಗ, ತಾಲೂಕು ದಂಡಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಾಲ್ಕು ಎಕರೆ ಜಾಗವನ್ನು ಸ್ಮಶಾನಕ್ಕೆ ಮೀಸಲಿಟ್ಟು, ಉಳಿದ ಜಮೀನಿನ ದಾಖಲೆ ಪರಿಶೀಲನೆ ಮಾಡಿ ಖಾತೆ ನೀಡುವಂತೆ ಸೂಚಿಸಲಾಯಿತು.ವಿಶೇಷ ಚೇತನರಾದ ಗುರುಲಿಂಗಪ್ಪ ಅವರು ಪತ್ನಿ ಶೋಭಾ ಅವರೊಂದಿಗೆ ಅರ್ಜಿ ಸಲ್ಲಿಸಿ ತನಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದಾಗ, ಶಾಸಕರು ನಿವೇಶನ ನೀಡುವ ಜೊತೆಗೆ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ಕೆಂಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್‌, ಗ್ರಾಮಾಂತರ ವೃತ್ತ ನಿರೀಕ್ಷಕ ಅರುಣ ಕುಮಾರ್‌, ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು, ಗ್ರಾಮದ ಮುಖಂಡರಾದ ಮಂಜುರಾಜು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.