ವಿದ್ಯಾರ್ಥಿಗಳು ಪ್ರತಿಯೊಂದು ವಿಷಯ ವೈಜ್ಞಾನಿಕ ದೃಷ್ಟಿಕೋನದಿಂದ ಅವಲೋಕಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು
ಕಂಪ್ಲಿ: ವಿದ್ಯಾರ್ಥಿ ಜೀವನದಿಂದಲೇ ವಿಜ್ಞಾನ ವಿಚಾರಧಾರೆ ಅಳವಡಿಸಿಕೊಳ್ಳುವುದರ ಜತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಷಾ. ಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಚಾರ್ಯೆ ಸುಜಾತ ಹೇಳಿದರು.
ಪಟ್ಟಣದ ಷಾ. ಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಖ್ಯಾತ ವಿಜ್ಞಾನಿ ಸರ್ ಸಿ.ವಿ. ರಾಮನ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಪ್ರತಿಯೊಂದು ವಿಷಯ ವೈಜ್ಞಾನಿಕ ದೃಷ್ಟಿಕೋನದಿಂದ ಅವಲೋಕಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ರಶ್ನಿಸುವ ಮನೋಭಾವ, ಕುತೂಹಲ ಹಾಗೂ ಸಂಶೋಧನಾ ಆಸಕ್ತಿ ರೂಢಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೊಸ ಸಾಧನೆ ಮಾಡಲು ಮುಂದಾಗಬೇಕು. ಮೂಢನಂಬಿಕೆಗಳಿಂದ ದೂರವಿದ್ದು, ವೈಜ್ಞಾನಿಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ಡಾ. ಬಿ.ಸುನಿಲ್ ಮಾತನಾಡಿ, ಸರ್ ಸಿ.ವಿ.ರಾಮನ್ ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಭಾರತೀಯ ವಿಜ್ಞಾನಿ. ಏಷ್ಯಾ ಖಂಡದಲ್ಲಿಯೇ ವಿಜ್ಞಾನ ವಿಭಾಗದಲ್ಲಿ ಮೊದಲ ಬಾರಿಗೆ ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಆವಿಷ್ಕರಿಸಿದ ರಾಮನ್ ಪರಿಣಾಮ ವಿಜ್ಞಾನ ಲೋಕದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಆವಿಷ್ಕಾರವನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದು, ಭಾರತೀಯ ವಿಜ್ಞಾನ ಕ್ಷೇತ್ರದ ಹೆಮ್ಮೆಯ ಸಂಗತಿಯಾಗಿದೆ ಎಂದರು.ವಿದ್ಯಾರ್ಥಿಗಳು ಸಿ.ವಿ.ರಾಮನ್ ಅವರ ಜೀವನ, ಸಾಧನೆ ಹಾಗೂ ವೈಜ್ಞಾನಿಕ ಕೊಡುಗೆಗಳನ್ನು ಆದರ್ಶವಾಗಿಟ್ಟುಕೊಂಡು ವಿಜ್ಞಾನ ಅಧ್ಯಯನ ಮತ್ತು ಸಂಶೋಧನೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಸಿಒ ಟಿ.ಎಂ.ಬಸವರಾಜ್, ಶಿಕ್ಷಕರಾದ ಜಯಮ್ಮ, ಟಿ.ಶೋಭಾ, ಸರೋಜಾ, ಮೇಘ, ಯಶೋಧ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.