ಕನ್ನಡಪ್ರಭ ವಾರ್ತೆ ಅರಸೀಕೆರೆ
ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲೂ ಡಿಜಿಟಲ್ ಬೋಧನಾ ವ್ಯವಸ್ಥೆ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಆಯಾಮ ನೀಡುತ್ತಿದೆ. ಆದರೆ ತಾಲೂಕಿನ ಕೆಲವೇ ಶಾಲೆಗಳಲ್ಲಿ ಈ ಸೌಲಭ್ಯ ಲಭ್ಯವಿರುವುದರಿಂದ, ಎಲ್ಲಾ ಸರ್ಕಾರಿ ಶಾಲೆಗಳಿಗೂ ಡಿಜಿಟಲ್ ಶಿಕ್ಷಣವನ್ನು ವಿಸ್ತರಿಸುವ ಅಗತ್ಯವಿದೆ ಎಂಬುದು ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣಾಸಕ್ತರ ಅಭಿಪ್ರಾಯವಾಗಿದೆ.ಪ್ರಸ್ತುತ ತಾಲೂಕಿನ ಸುಮಾರು 55ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಅನುದಾನ ನೀಡಿ ಡಿಜಿಟಲ್ ಟಿವಿಗಳನ್ನು ಅಳವಡಿಸಲಾಗಿದೆ. ಒಂದನೇ ತರಗತಿಯಿಂದ ಏಳನೇ ತರಗತಿವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದ ಎಲ್ಲಾ ವಿಷಯಗಳ ಸುಮಾರು 360 ಪಾಠಗಳನ್ನು ಪೆನ್‌ಡ್ರೈವ್ ಮೂಲಕ ಅಳವಡಿಸಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ. ಶಿಕ್ಷಕರು ಟಿವಿಯಲ್ಲಿ ಪ್ರಸಾರವಾಗುವ ಪಾಠದ ಜೊತೆಗೆ ಪ್ರಮುಖ ಅಂಶಗಳನ್ನು ವಿವರಿಸುತ್ತಿದ್ದು, ವಿದ್ಯಾರ್ಥಿಗಳು ಟಿಪ್ಪಣಿಗಳನ್ನು ಬರೆದುಕೊಳ್ಳುವ ಮೂಲಕ ಕಲಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದ್ದಾರೆ. ದೃಶ್ಯ ಮಾಧ್ಯಮದ ಮೂಲಕ ಕಲಿಯುವ ಪಾಠಗಳು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಹೆಚ್ಚು ಕಾಲ ಉಳಿಯುತ್ತವೆ ಎಂಬುದು ಶಿಕ್ಷಕರ ಅನುಭವವಾಗಿದೆ. ಶಿಕ್ಷಕರ ಕೊರತೆ ಇರುವ ಸಂದರ್ಭದಲ್ಲೂ ಡಿಜಿಟಲ್ ಪಾಠಗಳು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುತ್ತಿವೆ. ವಿದ್ಯಾರ್ಥಿಗಳೇ ಸ್ವತಃ ಅಗತ್ಯ ವಿಷಯವನ್ನು ಆಯ್ಕೆ ಮಾಡಿಕೊಂಡು ಪಾಠವನ್ನು ವೀಕ್ಷಿಸುವ ಮಟ್ಟಿಗೆ ಈ ವ್ಯವಸ್ಥೆಗೆ ಹೊಂದಿಕೊಂಡಿದ್ದಾರೆ ಎಂದು ಶಿಕ್ಷಕರು ತಿಳಿಸಿದ್ದಾರೆ.ಇತ್ತೀಚೆಗೆ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಸರ್ಕಾರಿ ಕರ್ತವ್ಯಗಳಿಗೆ ಅನೇಕ ಶಿಕ್ಷರನ್ನು ನಿಯೋಜಿಸಿರುವ ಕಾರಣ, ಶಾಲೆಗಳಲ್ಲಿ ಬೋಧನೆಗೆ ಅಡಚಣೆ ಉಂಟಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಡಿಜಿಟಲ್ ತರಗತಿಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇನ್ನೂ ಹೆಚ್ಚಿನ ಸರ್ಕಾರಿ ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಎಲ್‌ಕೆಜಿ, ಯುಕೆಜಿ ಹಾಗೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಿರುವ ಶಿಕ್ಷಣ ಇಲಾಖೆಯ ಪ್ರಯತ್ನಕ್ಕೆ ಡಿಜಿಟಲ್ ಮೂಲಸೌಕರ್ಯ ಮತ್ತಷ್ಟು ಬಲ ತುಂಬಲಿದೆ. ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆ ಈ ದಿಸೆಯಲ್ಲಿ ಹೆಚ್ಚಿನ ಅನುದಾನ ಒದಗಿಸಿ ಎಲ್ಲ ಶಾಲೆಗಳಿಗೂ ಡಿಜಿಟಲ್ ಬೋಧನಾ ವ್ಯವಸ್ಥೆ ಕಲ್ಪಿಸಬೇಕೆಂಬುದು ಸಾರ್ವಜನಿಕರ ಆಶಯವಾಗಿದೆ.ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸ ಮತ್ತಷ್ಟು ಹೆಚ್ಚಲಿದ್ದು, ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸವನ್ನು ಶಿಕ್ಷಣ ತಜ್ಞರು ವ್ಯಕ್ತಪಡಿಸಿದ್ದಾರೆ.