ಕನ್ನಡಪ್ರಭ ವಾರ್ತೆ ದೇವನಹಳ್ಳಿ

ಮುಂಬರುವ ಸ್ಥಳೀಯ ಚುನಾವಣೆಗಳಿಗೆ ತಾಲೂಕಿನಲ್ಲಿ ಪಕ್ಷ ಬಲಿಷ್ಠಗೊಳಿಸಲು ದೇವನಹಳ್ಳಿ ತಾಲೂಕು ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ.ಮಂಜುನಾಥ್ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿ ಅಭಿನಂದಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹೋಬಳಿ, ಪಂಚಾಯಿತಿ, ಬೂತ್ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ ಬಂದಿಲ್ಲ, ಚುನಾವಣೆ ವೇಳೆ ಎರಡು ಪಕ್ಷಗಳ ಮುಖಂಡರು ಸಾಧಕ ಬಾಧಕಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುವರು. ನಮಗೆ ವಿರೋಧ ಪಕ್ಷವಾಗಿರುವುದು ಕಾಂಗ್ರೆಸ್ ಮಾತ್ರ, ಆ ಪಕ್ಷವನ್ನು ಸೋಲಿಸಲು ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತೇವೆ ಎಂದರು.

ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರವರು ಹಾಗೂ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿಯವರು ಮರು ಆಯ್ಕೆಯಾಗಿದ್ದಾರೆ. ರಾಜ್ಯದ ೩೩ ಜಿಲ್ಲೆಗಳಲ್ಲೂ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ, ದೇವನಹಳ್ಳಿಯಲ್ಲೂ ನೂತನ ಪದಾಧಿಕಾರಿಗಳನ್ನು ಜಿಲ್ಲಾಧ್ಯಕ್ಷರು ನೇಮಕ ಮಾಡಿದ್ದಾರೆ. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷ ಬಲಪಡಿಸುವ ಕೆಲಸ ಮಾಡಬೇಕು. ತಾಲೂಕಿನಲ್ಲಿ ಪಕ್ಷಕ್ಕಾಗಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಅಧಿಕಾರ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಅವರ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಬೇಕು, ಜೆಡಿಎಸ್ ಪಕ್ಷ ಜಾತ್ಯತೀತ ಪಕ್ಷ, ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇವೆ ಎಂದರು.

ನೂತನ ಪದಾಧಿಕಾರಿಗಳು:


ತಾಲೂಕು ಗೌರವಾಧ್ಯಕ್ಷರಾಗಿ ಸಂಪಂಗಪ್ಪ, ಅಧ್ಯಕ್ಷ ಎಸ್.ಮಹೇಶ್, ಕಾರ್ಯಾಧ್ಯಕ್ಷ ಜಿ.ಎ.ರವೀಂದ್ರ, ಪ್ರಧಾನ ಕಾರ್ಯದರ್ಶಿ ಜಿ.ಎಂ.ಮನೋಹರ್, ಉಪಾಧ್ಯಕ್ಷರಾಗಿ ವೆಂಕಟೇಶ್, ಶಿವಣ್ಣ.ಕೆ., ಎಸ್.ನಾಗೇಶ್, ಕೆ.ವಿ.ಮುನಿರಾಜು, ಇ.ಮಂಜುನಾಥ್, ಕಾರ್ಯದರ್ಶಿಯಾಗಿ ಯಲ್ಲಪ್ಪ, ರಾಮಾಂಜನೇಯದಾಸ್, ವಕ್ತಾರರಾಗಿ ಗಂಗಾಧರ್ ನೇಮಕವಾಗಿದ್ದಾರೆ.

ಇದೆ ವೇಳೆ ಜೆಡಿಎಸ್ ಯುವಘಟಕದ ಅಧ್ಯಕ್ಷ ಹೊಸಳ್ಳಿ ಟಿ.ರವಿ, ಟೌನ್ ಅಧ್ಯಕ್ಷ ಮುನಿನಂಜಪ್ಪ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ರಾಜಣ್ಣ, ಜೆಡಿಎಸ್ ಪಕ್ಷದ ತಾಲೂಕಿನ ಮುಖಂಡರು ಕಾರ್ಯಕರ್ತರು ಇದ್ದರು.