ರಾಜ್ಯಕ್ಕೆ ಹೊಸ ಪ್ರವಾಸೋದ್ಯಮ ನೀತಿ: ಸಿಎಂ

| Published : Jul 10 2024, 12:34 AM IST

ಸಾರಾಂಶ

ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಸುವ ಸಲುವಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯವಿರುವ ನೀಲಿನಕ್ಷೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಸುವ ಸಲುವಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯವಿರುವ ನೀಲಿನಕ್ಷೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ನಡೆದ ಇಲಾಖಾವಾರು ಸಭೆ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಸೋದ್ಯಮ ವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸೋದ್ಯಮವನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿ ಮಾಡಬಹುದಾಗಿದ್ದು, ಅದನ್ನು ದೃಷ್ಟಿಯಾಗಿಟ್ಟುಕೊಂಡು ಹೊಸ ಪ್ರವಾಸೋದ್ಯಮ ನೀತಿ ರೂಪಿಸಲಾಗುತ್ತದೆ. ಅದಕ್ಕೆ ಬೇಕಾಗದ ನೀಲಿನಕ್ಷೆಯನ್ನು ಅಧಿಕಾರಿಗಳು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ತಿಳಿಸಿದರು.

ಅನೇಕ ರಾಜ್ಯಗಳಲ್ಲಿ ಪ್ರವಾಸೋದ್ಯಮವೇ ಪ್ರಮುಖ ಆದಾಯದ ಮೂಲ. ಆದರೆ, ನಮ್ಮಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣವಿದ್ದರೂ ಅಭಿವೃದ್ಧಿಯಾಗುತ್ತಿಲ್ಲ. ಪ್ರವಾಸಿ ತಾಣಗಳಲ್ಲಿ ಮೂಲಸೌಲಭ್ಯ ಕೊರತೆಯಿದೆ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾದರೆ ಬಂಡವಾಳ ಹೂಡಿಕೆದಾರರು ಆಕರ್ಷಿತರಾಗುತ್ತಾರೆ. ಆಗ ಉದ್ಯೋಗ ಸೃಷ್ಟಿ ಪ್ರಮಾಣವೂ ಹೆಚ್ಚಲಿದೆ. ಅದಕ್ಕೆ ಬೇಕಾಗುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆ ವ್ಯಾಪ್ತಿಯಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿಯ ಸಾಧ್ಯಾಸಾಧ್ಯತೆಗಳನ್ನು ಗುರುತಿಸಿ ವರದಿ ನೀಡಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲದೇ ಸರ್ಕಾರದಿಂದಲೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲ ರೀತಿಯ ಅಂಶಗಳನ್ನೂ ಸೇರಿಸಲಾಗುವುದು. ಅದಕ್ಕೆ ಪೂರಕವಾದ ಅನುದಾನವನ್ನೂ ಸರ್ಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾವಾರು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿ:

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸಿ ತಾಣಗಳ ಸಮೀಕ್ಷೆ, ಸಂರಕ್ಷಣೆ, ಇತ್ಯಾದಿಗಳ ಕುರಿತು ಜಿಲ್ಲಾವಾರು ಮಾಸ್ಟರ್‌ ಪ್ಲ್ಯಾನ್‌ ಸಿದ್ಧಪಡಿಸಬೇಕು. ಮುಂದಿನ ಮೂರು ತಿಂಗಳ ಒಳಗಾಗಿ ಆ ಕಾರ್ಯ ಪೂರ್ಣಗೊಳಿಸಬೇಕು ಎಂದು ಸಿಎಂ ಸೂಚಿಸಿದರು.

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ:

ಕರಾವಳಿಯಲ್ಲಿ ರಾಜ್ಯದಲ್ಲಿ 320 ಕಿಮೀ ಉದ್ದದ ಕರಾವಳಿ ಪ್ರದೇಶವಿದ್ದು, ಈವರೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ. ಹೀಗಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಟಿಸಲು ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

---

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶದಲ್ಲಿ ಪ್ರವಾಸೋದ್ಯಮ

ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲು ಸಾಧ್ಯವಿದೆ. ಆ ಬಗ್ಗೆ ಗಮನಹರಿಸಬೇಕು. ಅಲ್ಲದೆ, ರಾಜ್ಯದ ಪ್ರತಿ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಬಹುದು ಎಂದು ಪ್ರಸ್ತಾಪಿಸಿದರು.

ಅದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲಿ ಅವಕಾಶವಿರುವಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಬಹುದು ಎಂದರು.