ಕೈವಾರ ತಾತಯ್ಯನ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ

| Published : Jan 02 2025, 12:30 AM IST

ಸಾರಾಂಶ

ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಉತ್ಸವ ಮೂರ್ತಿನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಕೈವಾರದ ಪ್ರಮುಖ ಬೀದಿಗಳಲ್ಲಿ ಉತ್ಸವವನ್ನು ನೆರವೇರಿಸಲಾಯಿತು. ಮಠದ ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಚಿಂತಾಮಣಿ: ಶ್ರೀ ಕ್ಷೇತ್ರ ಕೈವಾರದಲ್ಲಿ ಅಮರನಾರೇಯಣಸ್ವಾಮಿ ದೇವಾಲಯ, ಭೀಮಲಿಂಗೇಶ್ವರಸ್ವಾಮಿ ದೇವಾಲಯ ಮತ್ತು ಸದ್ಗುರು ಯೋಗಿನಾರೇಯಣ ಮಠದಲ್ಲಿ ಹೊಸವರ್ಷದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯಗಳನ್ನು ತಳಿರು ತೋರಣ, ಹೂಗಳಿಂದ ಸಿಂಗರಿಸಲಾಗಿತ್ತು.

ಶ್ರೀ ಕ್ಷೇತ್ರಕ್ಕೆ ಭಕ್ತಾದಿಗಳು ದೂರದ ಊರುಗಳಿಂದ ಆಗಮಿಸಿ ಸರದಿ ಸಾಲಿನಲ್ಲಿ ನಿಂತು ೨೦೨೫ರ ಹೊಸ ವರ್ಷದ ಮೊದಲನೇ ದಿನ ದೇವರ ದರ್ಶನ ಪಡೆದರು. ಕಾಲಜ್ಞಾನಿ ಸದ್ಗುರು ಯೋಗಿನಾರೇಯಣ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಬೆಳಗಿನ ಘಂಟನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಪೂಜೆಗಳನ್ನು ಆರಂಭಿಸಲಾಯಿತು. ಸದ್ಗುರು ತಾತಯ್ಯನವರಿಗೆ ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಪೂಜೆಯನ್ನು ಸಲ್ಲಿಸಲಾಯಿತು. ತಾತಯ್ಯನವರು ಜೀವಂತ ಸಮಾಧಿಯಾಗಿರುವ ಮೂಲ ಬೃಂದಾವನವನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ತಾತಯ್ಯನವರ ದರ್ಶನವನ್ನು ಪಡೆದು ಪುನೀತರಾದರು.

ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಉತ್ಸವ ಮೂರ್ತಿನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಕೈವಾರದ ಪ್ರಮುಖ ಬೀದಿಗಳಲ್ಲಿ ಉತ್ಸವವನ್ನು ನೆರವೇರಿಸಲಾಯಿತು. ಮಠದ ನಾದಸುಧಾರಸ ವೇದಿಕೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಂಜೆ ವಿಶೇಷ ಮಹಾಮಂಗಳಾರತಿ ನೆರವೇರಿಸಲಾಯಿತು. ಸಂಜೆ ವಿದ್ಯುತ್ ದೀಪಗಳಿಂದ ಬೆಟ್ಟವನ್ನು ಅಲಂಕರಿಸಲಾಗಿತ್ತು. ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನದಾಸೋಹ ವ್ಯವಸ್ಥೆಯನ್ನು ಟ್ರಸ್ಟ್ ಸಮಿತಿಯು ಆಯೋಜಿಸಿತ್ತು.