ಸಾರಾಂಶ
ಶಾಂತಿ, ಸುವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಆಚರಣೆ ಮುಗಿಸಿ । ಜೋರಾಗಿ ಕೂಗುವುದು, ಕಿರುಚುವುದು ನಿಷೇಧ
ಕನ್ನಡಪ್ರಭ ವಾರ್ತೆ ದಾವಣಗೆರೆಡಿ.31ರ ರಾತ್ರಿ 2024ರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು, ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆ ಸೂಚನೆಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೊಸ ವರ್ಷಾಚರಣೆ ಪ್ರಯುಕ್ತ ಮದ್ಯ ಸೇವಿಸಿ, ವಾಹನ ಚಾಲನೆ ಮಾಡುವುದು, ವಾಹನಗಳಲ್ಲಿ ಹೆಚ್ಚು ಜನರು ಸವಾರಿ ಮಾಡುವುದನ್ನು ನಿಷೇಧಿಸಿದೆ. ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ.
ನಗರದ ಆಯಕಟ್ಟಿನ ಸ್ಥಳಗಳು, ಮಹಿಳೆಯರ ಪಿಜಿಗಳು, ವಿದ್ಯಾರ್ಥಿ ನಿಲಯಗಳ ಬಳಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ವೈನ್ ಶಾಪ್‌ಗಳು ನಿಗದಿಪಡಿಸಿದ ಸಮಯಕ್ಕೆ ಬಂದ್ ಮಾಡಲು ಸೂಚಿಸಿದೆ. ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್ಸಾರ್ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.ಹೊಸ ವರ್ಷಾ ಚರಣೆಯಲ್ಲಿ ಯುವಕರು ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ನಿಶ್ಚಿತ ಎಂದು ಎಚ್ಚರಿಸಿದ್ದಾರೆ. ದಾವಣಗೆರೆ ಹೊರ ವಲಯದ ಕೊಂಡಜ್ಜಿ ಕೆರೆ, ದೇವರ ಬೆಳಕೆರೆ ಪಿಕಪ್ ಡ್ಯಾಂ, ಇತರೆ ಹೊಲ ಭಾಗಗಳಲ್ಲೂ ಪೊಲೀಸ್ ನಿಯೋಜನೆ ಮಾಡಿದೆ. ಸಾರ್ವಜನಿಕರಿಗೆ ಮುಖ್ಯವಾಗಿ ಯುವಕರು ಬೇರೆಯವರಿಗೆ ತೊಂದರೆಯಾಗದಂತೆ ಹೊಸ ವರ್ಷಾಚರಣೆ ಮಾಡಿಕೊಳ್ಳಬೇಕು. ವಾಹನಗಳನ್ನು ಅತೀ ವೇಗದಲ್ಲಿ ಚಾಲನೆ ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಜೋರಾಗಿ ಕೂಗುವುದು, ಕಿರುಚುವುದನ್ನು ನಿಷೇಧಿಸಿದೆ. ಅಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.
ನಗರ ಸೇರಿ ಜಿಲ್ಲೆಯ ತಾಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ ಪಟ್ಟಣಗಳಲ್ಲೂ ಪೊಲೀಸ್ ಬಂದೋಬಸ್ತ್ ಮಾಡಿದೆ. ನಗರದ ವಿವಿಧೆಡೆ ಚೆಕ್ ಪೋಸ್ಟ್ ತೆರೆದಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರು, ಇಬ್ಬರಿಗಿಂತ ಹೆಚ್ಚು ಜನ ದ್ವಿಚಕ್ರ ವಾಹನಗಳಲ್ಲಿ ಸಾಗುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಹೊಸ ವರ್ಷಾಚರಣೆ ವೇಳೆ ಕೋವಿಡ್-19ರ ಉಪ ತಳಿ ಎಒನ್ ವ್ಯಾಪಿಸುತ್ತಿರುವುದರಿಂದ ಸರ್ಕಾರ ಜಾರಿಗೊಳಿಸಿದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.ಸಾರ್ವಜನಿಕ, ಜನಸಂದಣಿ ಪ್ರದೇಶದಲ್ಲಿ ಪಟಾಕಿ ಸಿಡಿಸಬಾರದು. ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೇ, ಶಾಂತಿ ಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳು ಕಂಡು ಬಂದರೆ ತುರ್ತು ಸಹಾಯವಾಣಿ 112ಗೆ ಕರೆ ಮಾಡಬೇಕು ಹಾಗೂ ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮಾಹಿತಿ ನೀಡಬೇಕು. ಜಿಲ್ಲಾದ್ಯಂತ ಹೊಸ ವರ್ಷಾಚರಣೆ ಸಂಬಂಧ ಪೊಲೀಸ್ ಇಲಾಖೆಯಿಂದ ಕಾನೂನು, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳು ಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಗಳನ್ನು ಹಾಕುವುದಾಗಲೀ, ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ.
ಉಮಾ ಪ್ರಶಾಂತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ