ರಾಜ್ಯದಲ್ಲಿ ಮುಂಬರುವ 6 ತಿಂಗಳು ಅಂದಾಜು 36000 ಹುದ್ದೆಯನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಏನಾದರೂ ಅಕ್ರಮ ವೆಸಗಿದರೆ ಅವರಿಗೆ 5 ವರ್ಷ ಜೈಲು ಮತ್ತು ₹10 ಲಕ್ಷ ದಂಡವನ್ನು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

- ಪರೀಕ್ಷಾ ಅಕ್ರಮ ಎಸಗಿದರೆ 5 ವರ್ಷ ಜೈಲು, ₹10 ಲಕ್ಷ ದಂಡ । ರಾಜ್ಯದ ಡಿಸಿ, ಎಸ್‌ಪಿ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ‌

ರಾಜ್ಯದಲ್ಲಿ ಮುಂಬರುವ 6 ತಿಂಗಳು ಅಂದಾಜು 36000 ಹುದ್ದೆಯನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಏನಾದರೂ ಅಕ್ರಮ ವೆಸಗಿದರೆ ಅವರಿಗೆ 5 ವರ್ಷ ಜೈಲು ಮತ್ತು ₹10 ಲಕ್ಷ ದಂಡವನ್ನು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಅವರು ಶುಕ್ರವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯ ಆಗದಂತೆ ತಡೆಯಲು, ಎಲ್ಲ ಜಿಲ್ಲಾಡಳಿತಗಳು ಹಾಗೂ ಪೊಲೀಸ್ ಇಲಾಖೆ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಮೊಬೈಲ್ ಬಳಸುವಂತಿಲ್ಲ:

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ಜಾಮರ್‌ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಆಯ್ಕೆ, ಭದ್ರತಾ ತಪಾಸಣೆ ಹಾಗೂ ಪ್ರಶ್ನೆಪತ್ರಿಕೆಗಳ ವಿತರಣೆ ನಿರ್ವಹಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರಂತೆ ಕ್ರಮವಹಿಸಬೇಕು. ಪರೀಕ್ಷಾ ಕೇಂದ್ರದ ಒಳಗಿನ ಸಿಬ್ಬಂದಿ ಸೇರಿದಂತೆ ಯಾರಿಗೂ ಮೊಬೈಲ್ ಫೋನ್ ಬಳಸಲು ಅವಕಾಶವಿಲ್ಲ. ಎಲ್ಲರ ಮೊಬೈಲ್‌ಗಳನ್ನು ಪರೀಕ್ಷೆ ಆರಂಭಕ್ಕೂ ಮುನ್ನವೇ ಲಾಕರ್‌ನಲ್ಲಿ ಇಡುವುದು ಕಡ್ಡಾಯ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಅಥವಾ ಪರೀಕ್ಷಾ ಅಕ್ರಮದ ಕುರಿತು ವದಂತಿ ಹಬ್ಬಿಸುವವರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಲು ಕ್ರಮವಹಿಸಬೇಕು ಎಂದರು.

ರಾಜ್ಯದಲ್ಲಿ ನೌಕರಿ ಮತ್ತು ವಿವಿಧ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಸರ್ಕಾರ ಅತ್ಯಂತ ಗಂಭೀರವಾದ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸೂಚನೆ ನೀಡಿದರು.

36000 ಹುದ್ದೆಗಳಿಗೆ ಪರೀಕ್ಷೆಗಳು:

ಆಗಸ್ಟ್ 2 ರಿಂದ ಅಕ್ಟೋಬರ್ ಅವಧಿಯಲ್ಲಿ 36000 ಹುದ್ದೆಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಒಟ್ಟಾರೆಯಾಗಿ ಸುಮಾರು 35 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗಳನ್ನು ಬರೆಯಲಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು (ಅಕ್ರಮ ಮತ್ತು ಭ್ರಷ್ಟಾಚಾರ ತಡೆ) ಕಾಯ್ದೆ 2023’ರ ಅಡಿಯಲ್ಲಿ ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಯಾವುದೇ ರೀತಿಯ ಭ್ರಷ್ಟಾಚಾರದಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ಕನಿಷ್ಠ 5 ವರ್ಷ ಜೈಲು ಶಿಕ್ಷೆ, ₹10 ಲಕ್ಷ ದಂಡ ಹಾಗೂ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದರು.

ನಂಬಿಕೆ ಮೂಡಿಸೋದೇ ಮುಖ್ಯ ಉದ್ದೇಶ:

ಪರೀಕ್ಷೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಪ್ರತಿಯೊಬ್ಬ ಭಾಗೀದಾರರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಅಭ್ಯರ್ಥಿಗಳಿಗೆ ಪ್ರವೇಶ ಪತ್ರದಲ್ಲಿ ಡ್ರೆಸ್‌ ಕೋಡ್‌ ಮತ್ತು ನಿಷೇದಿತ ವಸ್ತುಗಳ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿಟ್ಟು, ಸಾರ್ವಜನಿಕರಲ್ಲಿ ಮತ್ತು ಅಭ್ಯರ್ಥಿಗಳಲ್ಲಿ ಸಂಪೂರ್ಣ ನಂಬಿಕೆ ಮೂಡಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅದೇ ರೀತಿ ಜಿಲ್ಲಾಧಿಕಾರಿಗಳು ಪೊಲೀಸ್‌ ವರಿಷ್ಠಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ಕೋಚಿಂಗ್‌ ಸೆಂಟರ್‌ಗಳು ಮತ್ತು ಅದರ ಉಪನ್ಯಾಸಕರ ಮೇಲೆ ನಿಗಾ ವಹಿಸಬೇಕು. ಅಗತ್ಯವಿದ್ದಲ್ಲಿ ಕೋಚಿಂಗ್‌ ಸೆಂಟರ್‌ಗಳನ್ನು ಭೇಟಿ ಮಾಡಿ ಎಂದು ಸೂಚಿಸಿದರು.

ಗೃಹಮಂತ್ರಿ ಪ್ರಿಯಾಂಕ ಖರ್ಗೆ , ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಹಾಗೂ ಇತರರು ಉಪಸ್ಥಿತರಿದ್ದರು.

- - -

-31ಕೆಡಿವಿಜಿ48:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು.