ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ.12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ.12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.12ರಂದು ಬೆಳಗ್ಗೆ 11.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯದುವಾಳ-ಮುದುವಾಳ ಮಾರ್ಗದಲ್ಲಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಹಾರನಹಳ್ಳಿ ಮೂಲಕ ಆಯನೂರಿಗೆ ತೆರಳಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದರು.

ನಂತರ ಭದ್ರಾವತಿ ತಾಲೂಕಿಗೆ ಆಗಮಿಸಲಿರುವ ಅವರು, ಅಂಡರ್‌ಬ್ರಿಡ್ಜ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬಿ.ಎಚ್. ರಸ್ತೆಯ ಮೂಲಕ ತೆರಳಿ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ರಂಗಪ್ಪ ವೃತ್ತದ ಮೂಲಕ ತಾಲೂಕು ಕಚೇರಿ ಬಳಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ ನಡೆಸಿ ರೈತರೊಂದಿಗೆ ಚರ್ಚಿಸುತ್ತಿದ್ದಾರೆ. ರೈತರ ಎಲ್ಲ ಸಾಲಗಳನ್ನು ಸರ್ಕಾರ ಮನ್ನಾ ಮಾಡಬೇಕು ಎಂಬ ಒತ್ತಾಯದೊಂದಿಗೆ ಅವರು ರಾಜ್ಯದಾದ್ಯಂತ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು.

ಸರ್ಕಾರ ಎಕರೆಗೆ 2500 ರು. ಬರ ಪರಿಹಾರ ಘೋಷಿಸಿದೆ. ಆದರೆ, ಈ ಮೊತ್ತ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಎಕರೆಗೆ ರು.೨೫ ಸಾವಿರ ಪರಿಹಾರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ಸತತ ಎಂಟು ಗಂಟೆ ವಿದ್ಯುತ್ ನೀಡುವ ಮೂಲಕ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬರದಿಂದ ಜಾನುವಾರುಗಳಿಗೂ ತೊಂದರೆಯಾಗಿದ್ದು, ಮೇವಿನ ಕೊರತೆ ಉಂಟಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರಿಗೆ ಮೇವು ಪೂರೈಕೆಗೆ ವಿಶೇಷ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಗೋಷ್ಠಿಯಲ್ಲಿ ಜೆಡಿಎಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಸತೀಶ್ ಕಸಟ್ಟಿ, ಮಧುಕುಮಾರ್, ಶಿವಮೂರ್ತಿ ಬಿ. ನಾಯ್ಕ್, ಯೋಗೀಶ್ ಹಾಗೂ ನಾಗೇಶ್ ಇದ್ದರು.