ಕನ್ನಡಪ್ರಭ ವಾರ್ತೆ ಬೆಳಗಾವಿ
ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಂ ಅಸೋಸಿಯೇಟ್ಸ್ ಮುಖ್ಯಸ್ಥ ಶಿವಾನಂದ ನೀಲಣ್ಣವರನನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಸಿಐಡಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಶಕ್ಕೆ ನೀಡುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಗಂಗಾಧರ್.ಕೆ. ಅವರು ನೀಲಣ್ಣವರ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.
ನೀಲಣ್ಣವರ ಪರ ಜಾಮೀನು ಅರ್ಜಿ:ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಿವಾನಂದ ನೀಲಣ್ಣವರ್ ಪರ ಜಾಮೀನು ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಜೂನ್ 1ರಂದು ನಡೆಯಲಿದೆ ಎಂದು ಅವರ ಪರ ವಕೀಲ ಆರ್.ಪಿ. ಪಾಟೀಲ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯವು ಶಿವಾನಂದ ನೀಲಣ್ಣವರನನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜೂನ್ 1ರಂದು ವಿಚಾರಣೆಗೆ ಬರಲಿದೆ. ನೀಲಣ್ಣವರ ವಿರುದ್ಧ ಯಾರೂ ನೇರವಾಗಿ ದೂರು ದಾಖಲಿಸಿಲ್ಲ. ಕಾಗವಾಡದಲ್ಲಿ ಒಬ್ಬರು ದೂರು ನೀಡಿರುವ ಮಾಹಿತಿ ಲಭ್ಯವಾಗಿದ್ದು, ಅದರ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದರು.
ಮೊದಲ ಹಂತದಲ್ಲಿ ಶಿವಾನಂದ ನೀಲಣ್ಣವರಗೆ ಜಾಮೀನು ದೊರಕಿಸುವ ಪ್ರಯತ್ನ ನಡೆಸಲಾಗುವುದು. ಬಳಿಕ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು. ಪ್ರಕರಣದ ತನಿಖೆ ಮುಂದುವರಿದಿರುವುದರಿಂದ ನ್ಯಾಯಾಂಗ ಪ್ರಕ್ರಿಯೆಯ ಮೂಲಕವೇ ತಮ್ಮ ಕಕ್ಷಿದಾರನ ಪರ ಹೋರಾಟ ಮಾಡಲಾಗುವುದು ಎಂದರು.-----------
ಬಾಕ್ಸ್ಎದೆನೋವು ಎಂದ ಶಿವಾನಂದ
ವಿಚಾರಣೆ ವೇಳೆ ತನಗೆ ಎದೆನೋವು ಸೇರಿದಂತೆ ಆರೋಗ್ಯ ಸಮಸ್ಯೆಗಳಿದ್ದು, ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವಂತೆ ನೀಲಣ್ಣವರ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯಕೀಯ ಪರೀಕ್ಷೆ ನಡೆಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದರು. ಬಿಮ್ಸ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಲಭ್ಯವಿದೆ. ಅಗತ್ಯವಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ವಕೀಲರ ಮೂಲಕ ಅರ್ಜಿ ಸಲ್ಲಿಸಬಹುದು. ಜೈಲಿನಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೂ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಒದಗಿಸುತ್ತಾರೆ ಎಂದು ನ್ಯಾಯಾಧೀಶರು ಹೇಳಿದರು. ಇದೇ ವೇಳೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ತನಿಖಾಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ನ್ಯಾಯಾಲಯ ನೀಲಣ್ಣವರ್‌ಗೆ ಸೂಚಿಸಿತು. ನ್ಯಾಯಾಂಗ ಬಂಧನದ ಆದೇಶ ಹೊರಬಿದ್ದ ನಂತರ ಶಿವಾನಂದ ನೀಲಣ್ಣವರನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.