ಭಾರತಕ್ಕೆ 1947ರ ಆ. 15ಕ್ಕೆ ಸ್ವಾತಂತ್ರ‍್ಯ ದೊರೆತರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದರಾಬಾದ್‌ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು.

ಕೊಪ್ಪಳ:

ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಸೇನಾನಿಗಳ ಕಾರ್ಯ ಶ್ಲಾಘನೀಯವಾಗಿದ್ದು ನಾವೆಲ್ಲರೂ ಸ್ಮರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತಕ್ಕೆ 1947ರ ಆ. 15ಕ್ಕೆ ಸ್ವಾತಂತ್ರ‍್ಯ ದೊರೆತರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದರಾಬಾದ್‌ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು ಎಂದರು.

ನಿಜಾಮರ ಆಡಳಿತದಲ್ಲಿ ಜನ ಸಾಮಾನ್ಯರಿಗೆ ವಾಕ್ ಸ್ವಾತಂತ್ರ‍್ಯ, ಸಂಘಟನಾ ಸ್ವಾತಂತ್ರ‍್ಯ ಹಾಗೂ ಪತ್ರಿಕಾ ಸ್ವಾತಂತ್ರ‍್ಯಕ್ಕೆ ಅವಕಾಶವಿರಲಿಲ್ಲ. ನಿಜಾಮರು ಉಸ್ಮಾನಾಬಾದಿನ ಕಾಶಿಂ ರಜ್ವಿ ನೇತೃತ್ವದಲ್ಲಿ ರಜಾಕರ ಪಡೆ ಎಂಬ ದಂಗೆಕೋರರನ್ನು ಒಳಗೊಂಡ ಸೈನ್ಯ ಕಟ್ಟಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ದೌರ್ಜನ್ಯ ಮಾಡುತ್ತಿದ್ದರು. ಇದನ್ನು ಸಹಿಸದ ಸ್ವಾಮಿ ರಮಾನಂದ ತೀರ್ಥರು ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟವನ್ನು ಅಹಿಂಸಾತ್ಮಕವಾಗಿ ಪ್ರಾರಂಭಿಸಿದರು ಎಂದು ಹೇಳಿದರು.

ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಹೋರಾಟ ಸಮಿತಿ ರಚಿಸುತ್ತಾ ಎಲ್ಲ ಜಿಲ್ಲಾ ಕೇಂದ್ರ ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಶಿಬಿರ ತೆರೆದರು. ಕಲಬರುಗಿ ಭಾಗದಲ್ಲಿ ಸರದಾರ್ ಶರಣಗೌಡ ಇನಾಂದಾರ, ರಾಮಚಂದ್ರ ವೀರಪ್ಪ ಹಾಗೂ ಕೊಪ್ಪಳ ಭಾಗದಲ್ಲಿ ಅಳವಂಡಿ ಶಿವಮೂರ್ತಿ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ಆರಂಭವಾಯಿತು. ಅಳವಂಡಿ ಶಿವಮೂರ್ತಿ ಸ್ವಾಮಿಗಳು ಕ್ಯಾಂಪಿನ ಅಧ್ಯಕ್ಷರಾಗಿ ಮುಂಡರಗಿಯಲ್ಲಿ ಶಿಬಿರ ತೆರೆದರು. ಶಿಬಿರದಲ್ಲಿ ಪುಂಡಲೀಕಪ್ಪ ಜ್ಞಾನ ಮೋಠೆ, ವೀರಭದ್ರಪ್ಪ ಶಿರೂರು, ಸಿ.ಎಂ. ಚರ್ಚಿಹಾಳಮಠ, ಸೋಮಪ್ಪ ಡಂಬಳ, ಯರಾಶಿ ಶಂಕ್ರಪ್ಪ, ಎಂ. ವಿರುಪಾಕ್ಷಪ್ಪ, ನರಸಿಂಗರಾವ್, ಜನಾರ್ಧನರಾವ್ ದೇಸಾಯಿ, ಡಾ. ದೇವೇಂದ್ರಕುಮಾರ ಹಕಾರಿ, ಡಾ. ಪಂಚಾಕ್ಷರಿ ಹಿರೇಮಠ ಹಾಗೂ ಇನ್ನೂ ಹಲವರು ಈ ಭಾಗದ ಹೋರಾಟಗಾರರ ತ್ಯಾಗ-ಬಲಿದಾನಗಳಿಂದ ನಮಗೆ ಸ್ವಾತಂತ್ರ‍್ಯ ದೊರೆಯಿತು ಎಂದರು.

ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿರುವುದರಿಂದ ಹಾಗೂ ರಾಷ್ಟ್ರದ ಸಾರ್ವಭೌಮತ್ವದ ಹಿತದೃಷ್ಟಿಯಿಂದ ಅಂದಿನ ಕೇಂದ್ರ ಗೃಹ ಸಚಿವ

ಸರ್ದಾರ್ ವಲ್ಲಭಬಾಯಿ ಪಟೇಲರ ದಿಟ್ಟತನದಿಂದ ಕೈಗೊಂಡ ಸೈನಿಕ ಕಾರ್ಯಾಚರಣೆಯಲ್ಲಿ ನಿಜಾಮನು ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ 1948ರ ಸೆ. 17ರಂದು ಈ ಭಾಗಗಳು ರಾಜ್ಯದ ಇತರ ಭಾಗಗಳಂತೆ ಸ್ವತಂತ್ರ‍್ಯವಾಗಿ ಉಸಿರಾಡಲು ಸಾಧ್ಯವಾಯಿತು ಎಂದು ಹೇಳಿದರು.

ಸ್ವಚ್ಛತಾ ಪ್ರತಿಜ್ಞೆ ಸ್ವೀಕಾರ:

ಸ್ವಚ್ಛತೆಯೇ ಸೇವೆ-2025ರ ವಿಶೇಷ ಜನಾಂದೋಲನ ನಿಮಿತ್ತ ಸ್ವಚ್ಛತಾ ಪ್ರತಿಜ್ಞೆಯನ್ನು ಕಾರ್ಯಕ್ರಮದಲ್ಲಿ ಸ್ವೀಕರಿಸಲಾಯಿತು.

ಆಕರ್ಷಕ ಪಥಸಂಚಲನ:

78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು. ಭಾಗವಹಿಸಿದ ತಂಡ ಹಾಗೂ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಲ್ಯಾಪ್‌ಟಾಪ್ ವಿತರಣೆ:

ಕಾರ್ಯಕ್ರಮದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 23 ಎಸ್‌ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಪ್ಪಳದ ಸ್ವಾಮಿ ವಿವೇಕಾನಂದ ಹಾಗೂ ಕಾಳಿದಾಸ ಪ್ರೌಢಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಶೇಖರ ಹಿಟ್ನಾಳ, ವಿಪ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ತಹಸೀಲ್ದಾರ್‌ ವಿಠ್ಠಲ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.