ಪೋಲಿಯೋ ಲಸಿಕಾ ಅಭಿಯಾನಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಕನ್ನಡಪ್ರಭ ವಾರ್ತೆ ಕಾರವಾರ
ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಡಿ.21ರಿಂದ 24ರವರೆಗೆ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 878 ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 1,04,581 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋಲಿಯೋ ಲಸಿಕಾ ಅಭಿಯಾನಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಡಿ. 21ರಂದು ಗೊತ್ತು ಪಡಿಸಿರುವ ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ 5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಾಗುತ್ತದೆ. ಡಿ.22ರಿಂದ 23ರವರೆಗೆ 2 ದಿನಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಡಿ.22ರಿಂದ 24 ರವರೆಗೆ 3 ದಿನಗಳ ಕಾಲ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ಮೂಲಕ ಆರೋಗ್ಯ ಕಾರ್ಯಕರ್ತರು 5 ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ. ಸಾರ್ವಜನಿಕರು ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳ ಸಹಕಾರ ಅಗತ್ಯವಿರುವದರಿಂದ ಎಲ್ಲರೂ ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷಾ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಶಂಕರ ರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ವೈ.ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಇದ್ದರು.