ಹಾವೇರಿ ಜಿಲ್ಲೆಯಲ್ಲಿ ಡಿ. 21ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಹಾವೇರಿ: ಜಿಲ್ಲೆಯಲ್ಲಿ ಡಿ. 21ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಗ್ರಾಮ ಪಂಚಾಯತಿಗಳಿಂದ ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ದಿನ ಹಾಗೂ ಸ್ಥಳದ ಬಗ್ಗೆ ಟಾಂ ಟಾಂ ಮೂಲಕ ಪ್ರಚಾರ ಕೈಗೊಳ್ಳಲು, ಪಲ್ಸ್ ಪೋಲಿಯೋ ದಿನದಂದು ಅಂಗನವಾಡಿ ಕೇಂದ್ರಗಳು ಆರಂಭ ಇರುವಂತೆ ನೋಡಿಕೊಳ್ಳಲು, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಎರಡ್ಮೂರು ದಿನ ಮುಂಚಿತವಾಗಿ ಪ್ರಚಾರ ಕೈಗೊಳ್ಳಲು, ಬ್ಯಾನರ್ ಹಾಗೂ ಭಿತ್ತಿ ಪತ್ರಗಳ ಪ್ರದರ್ಶಿಸಲು, ಕಬ್ಬುಕಟಾಯಿಸುವ ಕಾರ್ಮಿಕರ ಮಕ್ಕಳು, ಜಲ್ಲಿ ಒಡೆಯುವ, ಗಣಿಗಾರಿಕೆ ಹಾಗೂ ಕುರಿ ಕಾಯುವವರು ಸೇರಿದಂತೆ ಇತರೆ ವಲಸೆ ಕಾರ್ಮಿಕರ ಐದುವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ನಗರಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪೋಲಿಯೋ ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶಿಥಿಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುತ್ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರ ಪ್ರದೇಶಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೊದಲ ಒಂದು ವಾರ ಹಾಗೂ ನಂತರದ ಮೂರು ದಿನಗಳವರೆಗೆ ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಮಾತನಾಡಿ, ಡಿ.21 ರಿಂದ ಡಿ.24ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಡಿ.21 ರಂದು ಬೂತ್ ಮಟ್ಟದಲ್ಲಿ ಹಾಗೂ ನಂತರದ ದಿನಗಳಲ್ಲಿ ಮನೆ ಮನೆ ಭೇಟಿ ನೀಡಲಾಗುವುದು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ 1,11,932 ಹಾಗೂ ನಗರ ಪ್ರದೇಶದಲ್ಲಿ 36,809 ಸೇರಿ 1,48,741 ಸೊನ್ನೆಯಿಂದ ಐದು ಮಕ್ಕಳನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ 806 ಹಾಗೂ ನಗರ ಪ್ರದೇಶದಲ್ಲಿ 198 ಸೇರಿ 1,004 ಬೂತ್‌ಗಳನ್ನು ಗುರುತಿಸಲಾಗಿದೆ. ಇದಲ್ಲದೇ ಬಸ್ ನಿಲ್ದಾಣದಲ್ಲಿ ಬಸ್‌ಗಳಲ್ಲಿ ಸಂಚರಿಸುವ ಮಕ್ಕಳಿಗೆ ಹಾಗೂ ರೈಲು ನಿಲ್ದಾಣದಲ್ಲಿ ನಿಲುಗಡೆಯಾದ ರೈಲಿನಲ್ಲಿರುವ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 2,008 ವ್ಯಾಕ್ಸಿನೇರ್ಸಗ ಳನ್ನು ಹಾಗೂ 196 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.1,81,464 ಪೋಲಿಯೋ ಲಸಿಕೆ ಅವಶ್ಯಕತೆ ಇದ್ದು, ಈಗಾಗಲೇ ಜಿಲ್ಲೆಗೆ ಅಗತ್ಯ ಲಸಿಕೆ ಸರಬರಾಜಾಗಿದೆ. ಒಟ್ಟು 92 ಕೋಲ್ಡ್ ಚೈನ್ ಪಾಯಿಂಟ್‌ಗಳನ್ನು ಗುರುತಿಸಲಾಗಿದೆ. 1,438 ಆಶಾ ಕಾರ್ಯಕರ್ತೆಯರು ಹಾಗೂ 1,895 ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಭೆಗೆ ತಿಳಿಸಿದರು.ಸಭೆಯಲ್ಲಿ ಜಿಪಂ ಸಿಇಒ ರುಚಿ ಬಿಂದಲ್, ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಡಾ.ಜಗದೀಶ ಪಾಟೀಲ, ಡಾ.ನಿಲೇಶ, ಡಾ. ಚನ್ನವೀರಯ್ಯ ವಿರಕ್ತಮಠಮಠ, ಡಾ.ಸರಿತಾ, ಡಾ.ಪ್ರಭಾಕರ ಕುಂದೂರ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.ಶಾಲಾ ಮಕ್ಕಳಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಥಾ ಮೂಲಕ ಜಾಗೃತಿ ಮೂಡಿಸಬೇಕು ಹಾಗೂ ಪ್ರತಿ ಶಾಲೆಯಿಂದ ಓರ್ವ ವಿದ್ಯಾರ್ಥಿಯನ್ನು ಈ ಕಾರ್ಯಕ್ರಮದ ರಾಯಭಾರಿಯಾಗಿ ನೇಮಿಸಬೇಕು. ಖಾಸಗಿ ಶಾಲೆಗಳ ಪ್ಲೇ ಸ್ಕೂಲ್ ಹಾಗೂ ಎಲ್‌ಕೆಜಿ-ಯುಕೆಜಿಯಲ್ಲಿರುವ ಐದು ವರ್ಷದೊಳಗಿನ ಮಕ್ಕಳ ಪೋಷಕರಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ತಿಳುವಳಿಕೆ ನೀಡಲು ಖಾಸಗಿ ಶಾಲೆಗಳಿಗೆ ಸುತ್ತೋಲೆ ಹೊರಡಿಸುವಂತೆ ಡಿಡಿಪಿಐ ಅವರಿಗೆ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.