ಸಾರಾಂಶ
ಜಾತಿ ಗಣತಿ ಗುರುತಿಸಿರುವ ಒಟ್ಟು ಮನೆಗಳಲ್ಲಿ ಪ್ರತಿ ದಿನ ಶೇ.10ರಷ್ಟು ಗುರಿ ಸಾಧಿಸಬೇಕು. ಅ.7ರ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರು : ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿ) ಗುರುತಿಸಿರುವ ಒಟ್ಟು ಮನೆಗಳಲ್ಲಿ ಪ್ರತಿ ದಿನ ಶೇ.10ರಷ್ಟು ಗುರಿ ಸಾಧಿಸಬೇಕು. ತನ್ಮೂಲಕ ನಿಗದಿತ ಅ.7ರ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಆಮೆಗತಿಯಲ್ಲಿ ಸಾಗುತ್ತಿರುವ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳೊಂದಿಗೆ ಶುಕ್ರವಾರ ವರ್ಚುಯಲ್ ಸಭೆ ನಡೆಸಿದ ಅವರು, ಸಮೀಕ್ಷೆಯಲ್ಲಿ ಆಗುತ್ತಿರುವ ಗೊಂದಲ ಹಾಗೂ ನಿರ್ಲಕ್ಷ್ಯದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
‘ಒಟ್ಟು ಗಣತಿಗೆ ಗುರುತಿಸಿರುವ ಮನೆಗಳಲ್ಲಿ ಪ್ರತಿದಿನ ಶೇ.10 ಗುರಿ ಸಾಧಿಸಬೇಕು. ಅ.7ರ ಒಳಗಾಗಿ ಸಮೀಕ್ಷೆ ಪೂರ್ಣಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿ, ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಜ್ಯದಲ್ಲಿ ಒಟ್ಟು 2 ಕೋಟಿ ಕುಟುಂಬಗಳನ್ನು ಸಮೀಕ್ಷೆಗೆ ಗುರುತಿಸಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೂ ಸಮೀಕ್ಷೆ ಶುರುವಾಗಿಲ್ಲ. ಉಳಿದಂತೆ ಶುರುವಾಗಿರುವ 1.43 ಕೋಟಿ ಕುಟುಂಬಗಳ ಪೈಕಿ ಶೇ.4 ರಷ್ಟು ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ. ಸಮೀಕ್ಷೆ ಶುರುವಾಗಿ ನಾಲ್ಕು ದಿನವಾದರೂ ತಾಂತ್ರಿಕ ಸಮಸ್ಯೆ, ಸಿಬ್ಬಂದಿ ಗೈರು ಎಂದರೆ ಹೇಗೆ? ಇದನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.
ಶೇ.90 ರಷ್ಟು ಸಮಸ್ಯೆ ನಿವಾರಣೆ ಆಗಿದೆ-ಸಿಎಂ:
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾಂತ್ರಿಕ ಸಮಸ್ಯೆಯಿಂದ ಸಮೀಕ್ಷೆಗೆ ಅಡಚಣೆಯಾಗಿತ್ತು. ಈಗ ಶೇ.90ರಷ್ಟು ಸಮಸ್ಯೆ ನಿವಾರಣೆಯಾಗಿದ್ದು, ಇಂದೇ (ಶುಕ್ರವಾರ) ಪೂರ್ಣ ಸಮಸ್ಯೆ ಬಗೆಹರಿಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಸಮೀಕ್ಷೆಗೆ ಗುರುತಿಸಿರುವ ಮನೆಗಳ ಪೈಕಿ ಶೇ.4 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಪ್ರತಿ ನಿತ್ಯ ಕನಿಷ್ಠ ಶೇ.10ರಷ್ಟು ಮನೆಗಳ ಸಮೀಕ್ಷೆ ನಡೆಸಲು ಸೂಚಿಸಿದ್ದೇನೆ ಎಂದು ಹೇಳಿದರು.
ಪ್ರತಿನಿತ್ಯ ಪ್ರಗತಿ ಪರಿಶೀಲನೆ ನಡೆಸಿ : ಬಾಕಿ ಇರುವ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ. ಸಮೀಕ್ಷೆ ಕಾರ್ಯ ಚುರುಕುಗೊಳಿಸಿ. ಸಮೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರತಿನಿತ್ಯ ಪ್ರಗತಿ ಪರಿಶೀಲನೆ ನಡೆಸಿ. ಸಮಸ್ಯೆಗಳಿದ್ದರೆ ಬಗೆಹರಿಸಿ ನಿಗದಿತ ವೇಳೆಗೆ ಸಮೀಕ್ಷೆ ಮುಗಿಯುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಇದೇ ವೇಳೆ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಇದು ಕೇವಲ ಹಿಂದುಳಿದ ವರ್ಗಗಳ ಆಯೋಗದ ಕೆಲಸವಲ್ಲ ಎಂಬುದನ್ನು ಅರಿಯಬೇಕು ಎಂದು ಸ್ಪಷ್ಟಪಡಿಸಿದ್ದೇನೆ ಎಂದರು.
2.76 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣ:
ಅಧಿಕಾರಿಗಳೊಂದಿಗೆ ಸಭೆ ನಡೆಸುವ ವೇಳೆಗೆ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಗುರುತಿಸಿರುವ 1.43 ಕೋಟಿ ಕುಟುಂಬಗಳ ಪೈಕಿ 2,76,016 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಎಲ್ಲಾ ಗಣತಿದಾರರು ಗಂಭೀರವಾಗಿ ಕೆಲಸ ಮಾಡಿ ಅ.7ರ ಒಳಗಾಗಿ ಗಣತಿ ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಇದು ಸರ್ಕಾರಿ ಕೆಲಸ, ಅಸಹಕಾರ ತೋರಿಸುವಂತಿಲ್ಲ:
ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಬೈರತಿ ಸುರೇಶ್, ಕೃಷ್ಣಬೈರೇಗೌಡ, ರಹೀಂ ಖಾನ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್, ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವರು ಹಾಜರಿದ್ದರು.
ಗುಡ್ಡಗಾಡು ಪ್ರದೇಶದಲ್ಲಿ ಶಾಲೆಗಳಲ್ಲೇ ಸಮೀಕ್ಷೆ
ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನ ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕವೂ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.--
ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳದ
30,000 ಗಣತಿದಾರರು: ಸಿಎಂ ಕಿಡಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿ ನಾಲ್ಕು ದಿನ ಕಳೆದರೂ ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಸುಮಾರು 30,000 ಗಣತಿದಾರ ಸಿಬ್ಬಂದಿ ಸಮೀಕ್ಷಾ ಆ್ಯಪ್ ಡೌನ್ ಲೋಡ್ ಮಾಡಿಕೊಂಡಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ತಾಂತ್ರಿಕ ದೋಷದ ಜತೆಗೆ ನ್ಯಾಯಾಲಯದಲ್ಲಿ ಸಮೀಕ್ಷೆ ಸಂಬಂಧ ಪ್ರಕರಣಗಳ ವಿಚಾರಣೆ ಮುಂದುವರಿದಿದ್ದ ಕಾರಣ ಬಹಳಷ್ಟು ಸಮೀಕ್ಷಕರು ಆ್ಯಪ್ ಡೌನ್‌ಲೋಡ್ ಮಾಡಿ ಸಮೀಕ್ಷೆ ಆರಂಭಿಸಿರಲಿಲ್ಲ. ಕೆಲವರು ಮೊಬೈಲ್ ಸಮಸ್ಯೆ, ನೆಟ್‌ವರ್ಕ್ ಸಮಸ್ಯೆ ಕಾರಣ ನೀಡಿ ಡೌನ್‌ಲೋಡ್ ಮಾಡಿರಲಿಲ್ಲ. ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಮೀಕ್ಷೆ ಪ್ರಮಾಣ ಬಹಳ ಕಡಿಮೆ ಇತ್ತು. ಈ ಬಗ್ಗೆ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಮೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎನ್ನಲಾಗಿದೆ.
- ಅ.7ರೊಳಗೇ ಸಮೀಕ್ಷೆ ಮುಗಿಸಲು ಕಟ್ಟುನಿಟ್ಟಿನ ಸೂಚನೆ- ನಿತ್ಯ 10% ಗಣತಿಯ ಗುರಿ ಸಾಧಿಸಲು ಸಿಎಂ ತಾಕೀತು
ಸಿದ್ದು ಸಭೆ ದಿನವೇ ಗಣತಿಗೆ ಭಾರಿ ವೇಗ
ರಾಜ್ಯದಲ್ಲಿ ಗುರುವಾರದವರೆಗೆ 1.82 ಲಕ್ಷ ಮನೆಗಳ ಸಮೀಕ್ಷೆಯಷ್ಟೇ ಪೂರ್ಣಗೊಂಡಿತ್ತು. ಆದರೆ, ಸಿಎಂ ಸಭೆ ನಡೆಸಿದ ಶುಕ್ರವಾರ ಒಂದೇ ದಿನ 2,54,176 ಮನೆಗಳ ಸಮೀಕ್ಷೆ ಕಾರ್ಯ ನಡೆದಿದೆ. ಈ ಮೂಲಕ ಐದು ದಿನಗಳಲ್ಲಿ ಒಟ್ಟು 4,36,996 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಂತಾಗಿದೆ.

;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))