ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಜನವರಿ 2022 ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ತಿಳಿಸಿದರು. ವಿಶ್ವ ಮಲೇರಿಯ ದಿನಾಚರಣೆ ಅಂಗವಾಗಿ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ರಾಜ್ಯದಲ್ಲಿ ಮಲೇರಿಯಾ ರೋಗವನ್ನು 2027ಕ್ಕೆ ನಿವಾರಣೆ ಮಾಡುವ ಗುರಿ ಹೊಂದಲಾಗಿದ್ದು, ಜಿಲ್ಲೆಯು ಈಗಾಗಲೇ ಮಲೇರಿಯಾ ನಿವಾರಣಾ ಗುರಿ ತಲುಪಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 2024ರಲ್ಲಿ ಜ್ವರ ಪೀಡಿತರಿಂದ 9,24,124 ರಕ್ತ ಲೇಪನಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 17 ಮಲೇರಿಯಾ ಪ್ರಕರಣಗಳು ದೃಢಪಟ್ಟಿದ್ದು, ದೃಢಪಟ್ಟ ಎಲ್ಲಾ ಪ್ರಕರಣಗಳು ಹೊರ ರಾಜ್ಯ ಪ್ರಕರಣಗಳಾಗಿವೆ. ಕಳೆದ ಜನವರಿ 2025 ರಿಂದ ಈವರೆಗೆ 2,30,049 ರಕ್ತ ಲೇಪನಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ ಯಾವುದೇ ಮಲೇರಿಯಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಂಗನಾಥ ಮಾತನಾಡಿ ಸಾರ್ವಜನಿಕರೂ ಸಹ ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಮಲೇರಿಯಾ ಹರಡದಂತೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿವರೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.