ಎನ್‌ಡಿಎ ಅಭ್ಯರ್ಥಿ ಯಾರೇ ಆಗಲಿ ಯೋಗಿಗೆ ಭರ್ಜರಿ ಜಯ

| Published : Oct 25 2024, 12:49 AM IST

ಸಾರಾಂಶ

ಚನ್ನಪಟ್ಟಣ/ರಾಮನಗರ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರು ಭರ್ಜರಿ ಜಯಗಳಿಸೋದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣ/ರಾಮನಗರ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರು ಭರ್ಜರಿ ಜಯಗಳಿಸೋದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ಟೌನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡುತ್ತೇನೆ. ಪಕ್ಷದ ಕಾರ್ಯಕರ್ತರು ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರನ್ನು ಗೆಲ್ಲಿಸಿಬೇಕು ಎಂದು ಹೇಳಿದರು.

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿ ಆಯ್ಕೆಯಾದರು. ಈಗ ಮಾತೃ ಪಕ್ಷ ಕಾಂಗ್ರೆಸ್ಸಿಗೆ ಮರಳಿದ್ದು, ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತು ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಕುಮಾರಸ್ವಾಮಿ ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಚನ್ನಪಟ್ಟಣದಲ್ಲಿ ಮಾಡಲಾಗದ ಅಭಿವೃದ್ಧಿ ಕೆಲಸಗಳನ್ನು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಶಾಸಕರಾದ ಬಾಲಕೃಷ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಮಾಜಿ ಸಂಸದ ಡಿ.ಕೆ ಸುರೇಶ್, ಡಾ. ರಂಗನಾಥ್, ಕದಲೂರು ಉದಯ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ, ಮಾಜಿ ಶಾಸಕ ಎಂ.ಸಿ ಅಶ್ವತ್ಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್ ರವಿ ಮತ್ತಿತರರು ಹಾಜರಿದ್ದರು.

ಬಾಕ್ಸ್‌..........

ಎನ್‌ಡಿಎ ಅನ್ಯಾಯ: ಯೋಗೇಶ್ವರ್ ಮತ್ತೆ ಕಾಂಗ್ರೆಸ್‌ಗೆ

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ/ರಾಮನಗರ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಸಿ.ಪಿ.ಯೋಗೇಶ್ವರ್ ಅವರಿಗೆ ಅನ್ಯಾಯವಾಗಿದೆ. ಈ ಕಾರಣದಿಂದಾಗಿ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ಅವರನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ತಮ್ಮ ಪಕ್ಷದ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಿಂದಲೇ ಎರಡು ಬಾರಿ ಶಾಸಕರಾಗಿದ್ದರು. ಈಗಲೂ

ಜನರು ಯೋಗೇಶ್ವರ್‌ ಅವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

24ಕೆಆರ್ ಎಂಎನ್ 1,2.ಜೆಪಿಜಿ

ಚನ್ನಪಟ್ಟಣ ಟೌನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹಾಗೂ ಸಚಿವರು, ಶಾಸಕರು ಪಾಲ್ಗೊಂಡಿದ್ದರು.