ರೇಣುಕಾಸ್ವಾಮಿ ಹತ್ಯೆ: ಸಿಬಿಐ ತನಿಖೆ ಬೇಕಿಲ್ಲ-ಪರಂ

| Published : Jun 19 2024, 01:06 AM IST

ಸಾರಾಂಶ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ರೇಣುಕಾಸ್ವಾಮಿ ನಿವಾಸಕ್ಕೆ ಗೃಹ ಸಚಿವ ಭೇಟಿ, ಸಾಂತ್ವನ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ನಟ ದರ್ಶನ್‌ ಗ್ಯಾಂಗ್‍ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಿರುವ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಯಾರ ಮುಲಾಜು, ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿಲ್ಲ. ವಾಸ್ತವಾಂಶ ಹೀಗಿರುವಾಗ ಸಿಬಿಐ ತನಿಖೆ ಯಾಕೆ ಬೇಕು ಎಂದರು.

ರೇಣುಕಾಸ್ವಾಮಿ ಹತ್ಯೆಯಂತಹ ಘಟನೆ ನಡೆಯಬಾರದಿತ್ತು. ಕೊಲೆ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಇದರಲ್ಲಿ ರಾಜಕೀಯ ಬೆರೆಸುವುದು ಬೇಡ. ದುಃಖತಪ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು. ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು.

ಇದರಲ್ಲಿ ಯಾರ ಪ್ರಭಾವವೂ ಇಲ್ಲ. ನಮ್ಮ ರಾಜ್ಯದ ಪೊಲೀಸರೆ ಪ್ರಾಮಾಣಿಕವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದರು.

ಕೊಲೆಗೀಡಾಗಿರುವ ರೇಣುಕಾಸ್ವಾಮಿ ಕುಟುಂಬ ಸಂಕಷ್ಟದಲ್ಲಿದ್ದು, ಜೀವನಕ್ಕಾಗಿ ಸರ್ಕಾರಿ ಉದ್ಯೋಗ ಕೊಡಿಸಿ ಎಂದು ಕೇಳುತ್ತಿದ್ದಾರೆ. ಈ ವಿಚಾರ ಕುರಿತು ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರಪಪ್ಪಿ, ಟಿ.ರಘುಮೂರ್ತಿ, ಮಾಜಿ ಸಚಿವ ಎಚ್.ಆಂಜನೇಯ, ಹಿರಿಯ ಪೊಲೀಸ್‌ ಅಧಿಕಾರಿಗಳು ಸಚಿವರ ಜೊತೆಗಿದ್ದರು.