ಕಾಂಗ್ರೆಸ್ ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ : ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ

| Published : Aug 02 2024, 12:54 AM IST / Updated: Aug 02 2024, 12:25 PM IST

ಕಾಂಗ್ರೆಸ್ ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ : ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಮುಡಾ ಹಗರಣ ಮುಂದಿಟ್ಟುಕೊಂಡು ವಿಪಕ್ಷಗಳು ತಮ್ಮ ಕುತಂತ್ರದಿಂದ ಅಧಿಕಾರ ಹಿಡಿಯಲು ಮುಂದಾಗಿದ್ದು, ಆದರೆ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ ಎಚ್ಚರಿಸಿದರು. 

 ಹಾಸನ :  ಮುಡಾ ಹಗರಣ ಮುಂದಿಟ್ಟುಕೊಂಡು ವಿಪಕ್ಷಗಳು ತಮ್ಮ ಕುತಂತ್ರದಿಂದ ಅಧಿಕಾರ ಹಿಡಿಯಲು ಮುಂದಾಗಿದ್ದು, ಆದರೆ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರವೀಣ್ ಗೌಡ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂವಿಧಾನಾತ್ಮಕವಾಗಿ ಬಹುಮತದಿಂದ ಅತಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ, ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ಮಾಡುತ್ತಿರುವುದು ಖಂಡನೀಯ. ಮುಡಾ ಹಗರಣ ತನಿಖಾ ಹಂತದಲ್ಲಿ ಇದ್ದರೂ ಇದೆ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್‌ ನಾಯಕರು ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಈ ಪ್ರಕರಣಕ್ಕೆ ಎಳೆತಂದು ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. 

ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಈ ಹಿಂದಿನಿಂದಲೂ ಹಿಂಬಾಗಿಲ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಅದರಲ್ಲೂ ಮೈತ್ರಿ ಕೇಂದ್ರ ಸಚಿವರಾಗಿರುವ ಎಚ್. ಕುಮಾರಸ್ವಾಮಿ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರನ್ನು ಸಭೆಯಲ್ಲಿ ಕೂರಲು ಅವನ್ಯಾರು ಎಂಬ ಮಾತನ್ನು ಆಡುವ ಮೂಲಕ ತಮ್ಮ ಮೈತ್ರಿಯ ಒಡಕನ್ನು ಪ್ರದರ್ಶನ ಮಾಡಿದ್ದಾರೆ. 

ಒಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರೀತಂ ಗೌಡ ಅವರಿಗೆ ಗೌರವ ಕೊಡದೆ ಮಾತನಾಡಿರುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು. ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ಬದಲು ಜೆಡಿಎಸ್‌, ಬಿಜೆಪಿ ನಾಯಕರು ತಮ್ಮನ್ನೇ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯ ಇದೆ, ಅವರ ತಟ್ಟೆಯಲ್ಲೇ ಹೆಗ್ಗಣ ಸತ್ತು ಬಿದ್ದಿರುವಾಗ ಮತ್ತೊಬ್ಬರ ತಟ್ಟೆ ನೀಡುವ ರೀತಿ ಬದಲಾಯಿಸಿಕೊಳ್ಳಬೇಕು. ಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ ಮುಂದಿನ ದಿನಗಳಲ್ಲಿ ಈ ರೀತಿಯ ಕುತಂತ್ರ ನಡೆದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.