ಮತದಾರರ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅರ್ಹರನ್ನು ಗುರುತಿಸಿ ಹೆಸರು ಸೇರ್ಪಡೆ ಮಾಡಿಸಬೇಕು.
ಹಾವೇರಿ: ನಮ್ಮ ಮತದಾನದ ಹಕ್ಕನ್ನು ಪ್ರಧಾನಿ ನರೇಂದ್ರ ಮೋದಿ ಅವರಾಗಲಿ, ಚುನಾವಣಾ ಆಯೋಗಕ್ಕಾಗಲಿ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರತಿಯೊಬ್ಬ ಮತದಾರನ ಮತವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮತದಾರರ ಪಟ್ಟಿಯಲ್ಲಿ ಯಾರೊಬ್ಬರ ಹೆಸರೂ ತಪ್ಪದಂತೆ ಕಾಂಗ್ರೆಸ್‌ನ ಬಿಎಲ್‌ಎಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ ಪ್ರತಿಭಟನಾ ಆಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.ಮತದಾರರ ಹಕ್ಕುಗಳನ್ನು ರಕ್ಷಿಸುವುದು ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅರ್ಹರನ್ನು ಗುರುತಿಸಿ ಹೆಸರು ಸೇರ್ಪಡೆ ಮಾಡಿಸಬೇಕು. ಯಾರ ಮತವೂ ತಪ್ಪದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಬಿಎಲ್‌ಎಗಳ ಮೇಲಿದೆ. ಇದು ಚುನಾವಣೆಯ ವರ್ಷವಾಗಿದ್ದು, ವರ್ಷವಿಡೀ ಚುನಾವಣೆ ಪ್ರಕ್ರಿಯೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಜೀವ ಎಷ್ಟು ಮುಖ್ಯವೋ ಮತವೂ ಅಷ್ಟೇ ಮುಖ್ಯ. ಹೀಗಾಗಿ ಮತದಾರರು ತಮ್ಮ ಮತದಾನದ ಹಕ್ಕಿನ ಬಗ್ಗೆ ಜಾಗೃತರಾಗಬೇಕು. ಮತದಾರರ ಪಟ್ಟಿಯತ್ತ ವಿಶೇಷ ಗಮನ ಹರಿಸಬೇಕು. ಕುತಂತ್ರದ ಮೂಲಕ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆಸಲಾಗಿದೆ ಎಂದು ಆರೋಪಿಸಿದರು.ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಿ ಧ್ವನಿ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಬಗ್ಗಬಾರದು. ಸಂವಿಧಾನಬದ್ಧವಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ಹೆಸ್ಕಾಂ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಮಾತನಾಡಿ, ಬಿಜೆಪಿಯ ಮತ ಕಳುವಿನ ಸಂಚು ರಾಜ್ಯದಲ್ಲಿ ಫಲಿಸುವುದಿಲ್ಲ. ಎಸ್‌ಐಆರ್ ಮೂಲಕ ಮತದಾನದ ಹಕ್ಕು ಕಸಿಯುವ ಪ್ರಯತ್ನ ನಡೆಸಲಾಗುತ್ತಿದೆ. 2029ರಲ್ಲಿ ಮತ್ತೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದು ಪಾಠ ಕಲಿಸಬೇಕು. ನಮ್ಮ ಹಕ್ಕುಗಳ ರಕ್ಷಣೆಗಾಗಿ ಸಂವಿಧಾನಬದ್ಧವಾಗಿ ಪ್ರತಿಭಟನೆ ನಡೆಸಿದರೂ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ನಮ್ಮ ಮತವನ್ನು ಕಿತ್ತುಕೊಳ್ಳಲು ನಿಮಗೆ ಯಾವ ಹಕ್ಕಿದೆ? ಚುನಾವಣಾ ಆಯುಕ್ತರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಕೂಡಲೇ ರಾಜೀನಾಮೆ ನೀಡಬೇಕು. ಅರ್ಹರ ಮತದಾನದ ಹಕ್ಕು ಉಳಿಸುವುದ್ಕಾಗಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ. ಬಡವರು, ದಮನಿತರ ಪರವಾಗಿ ಪಕ್ಷ ಸದಾ ನಿಲ್ಲುತ್ತದೆ ಎಂದು ಆಗ್ರಹಿಸಿದರು.
ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಮಾಜಿ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಎಂ.ಎಂ. ಮೈದೂರ, ಮಹಿಳಾ ಜಿಲ್ಲಾಧ್ಯಕ್ಷೆ ವಸಂತಾ ಬಾಗೂರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಡಾ.ಸಂಜಯ ಡಾಂಗೆ, ಶಂಕರ ಮೆಹರವಾಡೆ, ಶಹರ ಘಟಕದ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಬಸವರಾಜ ಹೆಡಿಗೊಂಡ, ಸಂಜೀವಗಾಂಧಿ ಸಂಜೀವಣ್ಣನವರ, ಮಲ್ಲಿಕಾರ್ಜುನ ಬೂದಗಟ್ಟಿ, ಸಿ.ಎಸ್. ಲಕ್ಷ್ಮೇಶ್ವರಮಠ ಇತರರು ಇದ್ದರು.ಪ್ರತಿಭಟನಾ ಮೆರವಣಿಗೆ...
ಪ್ರತಿಭಟನಾ ಆಂದೋಲನಕ್ಕೂ ಮೊದಲು ಅಂಬೇಡ್ಕರ ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಪ್ರತಿಭಟನಾ ಆಂದೋಲನ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ವಿವಿಧೆಡೆ ಸಂಚರಿಸಿ ಎಂಜಿ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪ್ರತಿಭಟನಾಕಾರರು ಎಂಎಂ ವೃತ್ತವನ್ನು ತಲುಪಿದರು. ಈ ವೇಳೆ ಕೇಂದ್ರ ಸರ್ಕಾರ, ರಾಜ್ಯ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.