ಸಾರಾಂಶ
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ 21 ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು,
ಭಟ್ಕಳ: ಇಲ್ಲಿನ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಸಚಿವ ಮಂಕಾಳು ಎಸ್. ವೈದ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಸಿಗಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ನನ್ನದೇನಿದ್ದರೂ ಶಿಕ್ಷಣಕ್ಕೆ ಮೊದಲ ಆದ್ಯತೆ ಆಗಿದೆ. ಭಟ್ಕಳ ತಾಲೂಕು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಎರಡನೇ ಸ್ಥಾನ ಬಂದಿರುವುದು ಖುಷಿ ತಂದಿದೆ. ಮುಂದಿನ ವರ್ಷ ರಾಜ್ಯಕ್ಕೆ ಪ್ರಥಮ ಸ್ಥಾನ ಬರುವಂತಾಗಬೇಕು ಎಂದರು.ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ಹರ್ಷನ್ ನಾಗಯ್ಯ ಗೊಂಡ, ಮೈಮುನಾ ಆಜೈಬ್, ಭಾವನಾ ಪ್ರಭಾಕರ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಅಲ್ಲದೇ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ 21 ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ನೀಡಿರುವ ಲ್ಯಾಪ್‌ಟಾಪ್‌ನ್ನು ಸಚಿವರು ವಿತರಿಸಿದರು. ಇದೇ ವೇಳೆ ಈ ವರ್ಷದ ಶೈಕ್ಷಣಿಕ ಸಾಧನೆಗೆ ವಿನೂತನ ಕಾರ್ಯಕ್ರಮಗಳಿಂದ ಕಾರ್ಯಯೋಜನೆ ರೂಪಿಸಿ ಯಶಸ್ಸನ್ನು ಪಡೆದಿರುವ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಅವರನ್ನು ಸಚಿವರು ಸನ್ಮಾನಿಸಿದರು.ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎನ್.ಜಿ. ನಾಯಕ, ಜಿಲ್ಲಾ ಅಕ್ಷರ ದಾಸೋಹ ನಿರ್ದೇಶಕ ವಿ.ಟಿ. ನಾಯ್ಕ, ತಹಸೀಲ್ದಾರ್ ನಾಗರಾಜ ನಾಯ್ಕಡ ಮುಂತಾದವರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ ವಂದಿಸಿದರು.
ಶಿಕ್ಷಕ ಶ್ರೀಧರ ಶೇಟ್ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಜಾಮಿಯಾ ಜಾಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ನಾಯಕ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ನಾಗೇಶ ಮಡಿವಾಳ ಅವರು ಶೈಕ್ಷಣಿಕ ವಿಷಯಗಳನ್ನು ಪ್ರಸ್ತುತಪಡಿಸಿದರು. ಭಟ್ಕಳ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.