ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಧ್ಯಪ್ರವೇಶ ಮಾಡುವುದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು ಮಾಡಬಾರದು ಎಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ ಸ್ಪಷ್ಟ ಸೂಚನೆ ಇದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಸಿವಿಲ್ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಧ್ಯ ಪ್ರವೇಶ ಮಾಡಬಾರದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಆರ್.ಮಹೇಶ್ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿವಿಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಧ್ಯಪ್ರವೇಶ ಮಾಡುವುದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು ಮಾಡಬಾರದು ಎಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ ಸ್ಪಷ್ಟ ಸೂಚನೆ ಇದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದರು.

ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ. ಇದರ ಮೂಲಕ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ, ಆನ್‌ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್ ಅಥವಾ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಪ್ರತಿದಿನ ಪಾಂಡವಪುರದ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ. ನೀರಿನ ಬಿಲ್, ದೂರವಾಣಿ ಬಿಲ್, ವಿದ್ಯುತ್ ಬಿಲ್, ಸಣ್ಣಪುಟ್ಟ ಬ್ಯಾಂಕ್ ಸಾಲ ವಸೂಲಾತಿ, ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ವ್ಯಾಜ್ಯಗಳು ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಲು ವಿಶೇಷ ಪೀಠಗಳನ್ನು ರಚಿಸಲಾಗುವುದು ಎಂದರು.

ಲೋಕ ಅದಾಲತ್‌ನಲ್ಲಿ ಎಂವಿಸಿ ಪ್ರಕರಣಗಳು 124, ಎಂಎಂಆರ್‌ಡಿ ಪ್ರಕರಣಗಳು 2, ಎಲ್‌ಎಸಿ ಪ್ರಕರಣಗಳು 4, ವಿಭಾಗದ ದಾವೆ ಪ್ರಕರಣಗಳು 112, ಇತರೆ ಸಿವಿಲ್ ಪ್ರಕರಣಗಳು 130, ನಿರ್ದಿಷ್ಟ ಪರಿಹಾರಕ್ಕಾಗಿ ದಾಖಲಾದ ದಾವೆಗಳು 145, ಕ್ರಿಮಿನಲ್ ಪ್ರಕರಣಗಳು 60 ಹಾಗೂ ಎನ್‌ಐ ಆಕ್ಟ್ ಅಡಿಯಲ್ಲಿ ದಾಖಲಾದ 245 ಪ್ರಕರಣಗಳು ಸೇರಿದಂತೆ ಒಟ್ಟು 822 ಪ್ರಕರಣಗಳನ್ನು ಐದು ನ್ಯಾಯಾಲಯಗಳಿಂದ ಗುರುತಿಸಲಾಗಿದೆ ಎಂದರು.

ರಾಜೀಸಂಧಾನದ ಮೂಲಕ ಪ್ರಕರಣ ಇತ್ಯಾರ್ಥ ಮಾಡಿಕೊಳ್ಳುವ ಕಕ್ಷಿದಾರರು ವಕೀಲರ ಮೂಲಕ ಅರ್ಜಿಸಲ್ಲಿಸಿ ಪ್ರಕರಣ ಬಗೆಹರಿಸಿಕೊಳ್ಳಬೇಕು. ಈ ಹಿಂದೆ ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 6,300 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಜೆಎಂಎಫ್‌ಸಿ ನ್ಯಾಯಾಧೀಶೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಎಚ್.ಎಸ್. ಪೂಜಾಶ್ರೀ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜೆಎಂಎಫ್‌ಸಿ ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಬಾಬು, ಒಂದನೇ ಅಪರ ಸಿವಿಲ್ ನ್ಯಾಯಾಧೀಶ ಶ್ರೀಧರ್, ಮೂರನೇ ಅಪರ ಸಿವಿಲ್ ನ್ಯಾಯಾಧೀಶ ಮದನ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಗಂಗರಾಜು ಹಾಗೂ ಕಾರ್ಯದರ್ಶಿ ಮೋಹನ್ ಕುಮಾರ್ ಉಪಸ್ಥಿತರಿದ್ದರು.