ಸಾರಾಂಶ
ಗದಗ: ಜಿಲ್ಲೆಯಲ್ಲಿ ಡಿ.7 ಮತ್ತು 8 ರಂದು ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಡಿ.7 ರಂದು ಮಧ್ಯಾಹ್ನ 2 ರಿಂದ 4ರ ವರೆಗೆ ಹಾಗೂ ಡಿ. 8 ರಂದು ಬೆಳಗ್ಗೆ 10 ರಿಂದ 11.30ರ ವರೆಗೆ ಹಾಗೂ ಮಧ್ಯಾಹ್ನ 2 ರಿಂದ 4ರ ವರೆಗೆ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿ ಸದಸ್ಯ ಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ 10 ನಿಮಿಷ ಮುಂಚೆಯೇ ಹಾಜರಾಗಿರಬೇಕು. ಡಿ.7 ಶನಿವಾರದಂದು ಪರೀಕ್ಷೆಗಳು ಜರುಗುವ ಪರೀಕ್ಷಾ ಕೇಂದ್ರಗಳಲ್ಲಿನ ಶಾಲೆ ಕಾಲೇಜುಗಳನ್ನು ಆ ದಿನದ ಮಟ್ಟಿಗೆ ರಜೆಯೆಂದು ಘೋಷಿಸಬೇಕು. ಮುಂದಿನ ದಿನಗಳಲ್ಲಿ ಆ ದಿನದ ಅಧ್ಯಯನ ಸರಿದೂಗಿಸಿಕೊಳ್ಳಬೇಕು. ವಿಕಲಚೇತನರಿಗೆ ನೆಲಮಹಡಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯಾಗಬೇಕು. ಒಟ್ಟಾರೆ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆ ಯಶಸ್ವಿಯಾಗಿ ಜರುಗಿಸಬೇಕು.ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ, ಪಾರದರ್ಶಕತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.