25 ಲಕ್ಷ ರು. ವೆಚ್ಚದಲ್ಲಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ಬಿಡುಗಡೆಯಾಗಿದೆ. ಸರ್ಕಾರದಿಂದ ಅಗತ್ಯ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನದ ಕೊರತೆ ಇಲ್ಲ.
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರು, ರೈತರು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಪ್ರಮುಖ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.ನಗರದ ಶಂಕರ ಮಠದಿಂದ ಆರಂಭವಾಗಿ ಹೊಳಲು ಗ್ರಾಮದ ಮೂಲಕ ಮೇಲುಕೋಟೆ, ಶ್ರವಣಬೆಳಗೊಳ ಹಾಗೂ ಹಾಸನ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗೆ 5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದರು.
ಗುತ್ತಲು ಗ್ರಾಮದ ಅರ್ಕೇಶ್ವರ ದೇವಾಲಯದ ಸೇತುವೆ ಕಾಮಗಾರಿಗೂ 5 ಕೋಟಿ ರು. ಅನುದಾನ ಬಿಡುಗಡೆ. ಶೀಘ್ರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಅದೇ ರೀತಿ ತಾವರೆಕೆರೆ–ಹಾಲಹಳ್ಳಿ ಸಂಪರ್ಕ ಕಲ್ಪಿಸುವ ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ 5 ಕೋಟಿ ರು ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.ಮಂಡ್ಯ ನಗರದ ಹಾಗೂ ಸುತ್ತಮುತ್ತಲಿನ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿರುವ ಮೂರು ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟು 15 ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಜೊತೆಗೆ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೆಚ್.ಕೊಡಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 75 ಲಕ್ಷ ರು. ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
25 ಲಕ್ಷ ರು. ವೆಚ್ಚದಲ್ಲಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ಬಿಡುಗಡೆಯಾಗಿದೆ. ಸರ್ಕಾರದಿಂದ ಅಗತ್ಯ ಅನುದಾನವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಅಭಿವೃದ್ಧಿ ಕಾಮಗಾರಿಗಳು ಕೇವಲ ಕಾಗದದ ಮೇಲಿನ ಯೋಜನೆಗಳಾಗದೆ ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಹಾಗೂ ಸೇತುವೆ ಕಾಮಗಾರಿಗಳು ಶೀಘ್ರ ಪೂರ್ಣಗೊಂಡು ಸಾರ್ವಜನಿಕರು, ರೈತರು ಹಾಗೂ ವಾಣಿಜ್ಯ ವಾಹನಗಳು ಸೇರಿದಂತೆ ಎಲ್ಲರಿಗೂ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಪೂರ್ಣಿಮಾ ರವಿ, ನಹಿಂ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.