ಮುಂದಿನ ವರ್ಷ ನಡೆಯಲಿರುವ ಕಾರ್ಕಳದ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವ್ಯವಸ್ಥೆ ಮೇಲ್ವಿಚಾರಣೆಗೆ ಶೀಘ್ರದಲ್ಲೇ ನೋಡಲ್ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ದಸರಾ ಮಾದರಿ ಸಮಿತಿ: ವ್ಯವಸ್ಥೆ ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿ ನೇಮಕ ಜೊತೆಗೆ ದಸರಾ ಮಾದರಿಯಲ್ಲಿ ಎಲ್ಲಾ ಇಲಾಖೆಗಳನ್ನು ಒಳಗೊಂಡ ಸಮಿತಿ ರಚಿಸಿ ಜಬಾಬ್ದಾರಿ ಹಂಚಿಕೆ ಮಾಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಕ್ರಿಯೆ ಪ್ರಾರಂಭಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಇದಕ್ಕೂ ಮೊದಲು ಮಾತನಾಡಿದ ಸುನೀಲ್‌ಕುಮಾರ್, ಮುಂದಿನ ವರ್ಷ ಫೆಬ್ರವರಿಯಲ್ಲಿ ಕಾರ್ಕಳದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ನಡೆಯಲಿದೆ. ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ. ಮೂಲಸೌಕರ್ಯ ಸೇರಿ ಇತರೆ ಸೌಲಭ್ಯ ಒದಗಿಸಲು ವಿಶೇಷ ಅನುದಾನ ಒದಗಿಸಬೇಕು. ಧಾರ್ಮಿಕ ಕಾರ್ಯದ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಈ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಮಾಡಲಾಗುವ ವ್ಯವಸ್ಥೆ ಮೇಲ್ವಿಚಾರಣೆಗೆ ಎಸಿ ಮಟ್ಟದ ನೋಡಲ್ ಅಧಿಕಾರಿ ನೇಮಿಸಬೇಕು ಎಂದು ಒತ್ತಾಯಿಸಿದರು.