ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 9ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ/ಬಾಗಲಕೋಟೆ

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 9ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರು ಬಿಜೆಪಿಯಿಂದ ಕಣಕ್ಕೆ ಇಳಿದಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ, ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಶೋಭಾಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹರಿಹರ ಶಾಸಕ ಬಿ.ಪಿ.ಹರೀಶ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.

ಈ ಮಧ್ಯೆ, ಮುಸ್ಲಿಮರು ತಮ್ಮ ಸಮುದಾಯಕ್ಕೂ ಒಂದು ಅವಕಾಶ ನೀಡುವಂತೆ ಪಟ್ಟು ಹಿಡಿದಿರುವುದರಿಂದ ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಯಾಗಿ ಬಹುತೇಕ ಶಾಮನೂರು ಕುಟುಂಬದ ಮೂರನೇ ತಲೆಮಾರಿನ ಸಮರ್ಥ ಎಂ.ಶಾಮನೂರು ಕಣಕ್ಕಿಳಿಯುವ ಸಾಧ್ಯತೆಯಿದ್ದು, ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಲು ಅವರು ಸಿದ್ಧತೆ ನಡೆಸಿದ್ದಾರೆ. ಬೃಹತ್‌ ಶೋಭಾಯಾತ್ರೆ ಮೂಲಕ ನಾಮಪತ್ರ ಸಲ್ಲಿಸುವ ಮೂಲಕ, ತಮ್ಮ ಶಕ್ತಿ ಪ್ರದರ್ಶನಕ್ಕೆ ಅವರು ಮುಂದಾಗಿದ್ದು, ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಗಿಯಾಗುವ ಸಾಧ್ಯತೆಯಿದೆ.

ಶುಕ್ರವಾರವಷ್ಟೇ ಅವರು ತಮ್ಮ ತಾಯಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಇತರರ ಜೊತೆಗೆ ತೆರಳಿ, ಕಾಂಗ್ರೆಸ್ ಪಕ್ಷದಿಂದ ಹಾಗೂ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದರು. ಈ ಮಧ್ಯೆ, ಹಿರಿಯ ನಾಯಕರ ಮನವೊಲಿಕೆ ಯತ್ನ ಸಫಲವಾಗದಿದ್ದರೆ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ, ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಕೂಡ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.

ಇನ್ನು, ಬಾಗಲಕೋಟೆ ಕ್ಷೇತ್ರದಲ್ಲಿ ವೀರಭದ್ರಯ್ಯ ಚರಂತಿಮಠ ಅವರು ಸೋಮವಾರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ಮೆರವಣಿಗೆ ನಡೆಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಂಸದ ಬೊಮ್ಮಾಯಿ ಮತ್ತಿತರ ನಾಯಕರು ಅವರಿಗೆ ಸಾಥ್‌ ನೀಡಲಿದ್ದಾರೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ವೀರಭದ್ರಯ್ಯ ಚರಂತಿಮಠ, ತಮ್ಮ ನಾಮಪತ್ರ ಸಲ್ಲಿಕೆ ವೇಳೆ, ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಮಧ್ಯೆ, ಎಚ್.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗುವ ಸಾಧ್ಯತೆಯಿದ್ದು, ಅವರು ಕೂಡ ಸೋಮವಾರ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಬೃಹತ್‌ ಶೋಭಾಯಾತ್ರೆ ಮೂಲಕ ನಾಮಪತ್ರ ಸಲ್ಲಿಸುವ ಮೂಲಕ, ತಮ್ಮ ಶಕ್ತಿ ಪ್ರದರ್ಶನಕ್ಕೆ ಅವರು ಮುಂದಾಗಿದ್ದು, ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆಯಿದೆ.