ಸಾರಾಂಶ
ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನ ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ ಸೋಮವಾರ ನಾಮಪತ್ರ ಸಲ್ಲಿಸಿದರು.ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ಪಿ.ಸಿ.ಮೋಹನ್, ಲೆಹರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.ಈ ವೇಳೆ ಮಾತನಾಡಿದ ವಿಜಯೇಂದ್ರ, ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೆವು. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.ಅಶೋಕ್ ಮಾತನಾಡಿ, ನಮ್ಮ ಇಬ್ಬರೂ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲ್ಲಲಿದ್ದಾರೆ. ಬಿಜೆಪಿ ಜೆಡಿಎಸ್ ಜಂಟಿಯಾಗಿ ಎದುರಿಸುತ್ತೇವೆ. ಎಲ್ಲ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದರು.