ನಾಳೆಯಿಂದ ಕರ್ನಾಟಕದಲ್ಲಿ ಮತ ಸಮರ ಆರಂಭ

| Published : Mar 27 2024, 01:04 AM IST / Updated: Mar 27 2024, 12:49 PM IST

ಸಾರಾಂಶ

ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಗುರುವಾರದಿಂದ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಗುರುವಾರದಿಂದ ಆರಂಭಗೊಳ್ಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ.

ಒಟ್ಟು ಎರಡು ಹಂತಗಳಲ್ಲಿ (ರಾಷ್ಟ್ರಮಟ್ಟದಲ್ಲಿ ಎರಡು ಮತ್ತು ಮೂರನೆಯ ಹಂತ) ರಾಜ್ಯದ ಲೋಕಸಭಾ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. 

ಏ.4ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್‌ ಪಡೆಯಲು ಕಡೆಯ ದಿನವಾಗಿದೆ. 

ಏ.26ರಂದು ಮತದಾನ ನಡೆಯಲಿದೆ.ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 

ಉಡುಪಿ-ಚಿಕ್ಕಬಳ್ಳಾಪುರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಜರುಗಲಿದೆ. 

ಮೊದಲ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳ ಪೈಕಿ ಚಿತ್ರದುರ್ಗ, ಚಾಮರಾಜನಗರ ಮತ್ತು ಕೋಲಾರ ಮೂರು ಎಸ್‌ಸಿ ಮೀಸಲು ಕ್ಷೇತ್ರಗಳಾಗಿದ್ದು, ಇನ್ನುಳಿದವು ಸಾಮಾನ್ಯ ಕ್ಷೇತ್ರಗಳಾಗಿವೆ.

ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಸೇರಿದಂತೆ ನೋಂದಾಯಿತ ರಾಜಕೀಯ ಪಕ್ಷಗಳು ಸಹ ತಮ್ಮ ಅಭ್ಯರ್ಥಿಗಳ ಆಯ್ಕೆಯ ಅಂತಿಮ ಹಂತದ ಕಸರತ್ತು ನಡೆದಿದೆ. 

ಕಾಂಗ್ರೆಸ್ ಪಕ್ಷ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿದೆ.

ಇನ್ನು, ಬಿಜೆಪಿ-ಜೆಡಿಎಸ್‌ ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವುದರಿಂದ ಬಿಜೆಪಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಜೆಡಿಎಸ್‌ ಮೂರು ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿಯು ಚಿತ್ರದುರ್ಗ ಕ್ಷೇತ್ರವೊಂದನ್ನು ಮಾತ್ರ ಅಖೈರುಗೊಳಿಸಬೇಕಾಗಿದೆ. 

ಜೆಡಿಎಸ್‌ ಸಹ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದು, ಬುಧವಾರ ಘೋಷಣೆ ಮಾಡುವ ನಿರೀಕ್ಷೆಯಿದೆ.

ಅಭ್ಯರ್ಥಿಗಳ ಘೋಷಣೆಯಿಂದ ಕೆಲವು ಕ್ಷೇತ್ರಗಳಲ್ಲಿ ಉದ್ಭವಿಸಿರುವ ಅಸಮಾಧಾನ ಹೋಗಲಾಡಿಸುವ ಪ್ರಯತ್ನವೂ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಭರದಿಂದ ನಡೆಯುತ್ತಿದೆ.

ಗುರುವಾರ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲಿ ಪ್ರಚಾರ ಬಿರುಸು ಮತ್ತಷ್ಟು ಹೆಚ್ಚಾಗಲಿದೆ. ಬಿರುಬಿಸಿಲು ಲೆಕ್ಕಿಸದೆ ಪ್ರಚಾರ ಕಾರ್ಯದಲ್ಲಿ ಅಭ್ಯರ್ಥಿಗಳ ಜತೆಗೆ ಎಲ್ಲಾ ರಾಜಕೀಯ ಪಕ್ಷಗಳ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಆರಂಭಮಾ.28ನಾಮಪತ್ರ ಕಡೆಯ ದಿನ ಏ.4ನಾಮಪತ್ರ ಪರಿಶೀಲನೆಏ.5ನಾಮಪತ್ರ ವಾಪಸ್‌ಏ.8ಮತದಾನ ದಿನಾಂಕಏ.26ಫಲಿತಾಂಶಜೂ.4