ನ್ಯಾಯಾಲಯದ ಆದೇಶದಂತೆ ಬಂಧನ ಪ್ರಕ್ರಿಯೆ ಕೈಗೊಳ್ಳಲು ಬಿಹಾರ ಪೊಲೀಸರು ಸ್ಥಳೀಯ ಪೊಲೀಸರ ಸಹಕಾರ ಕೋರಿದ್ದಾರೆ

ಬಳ್ಳಾರಿ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ, ಬಿಜೆಪಿ ನಾಯಕ ಟಿ.ಎಚ್. ಸುರೇಶ್ ಬಾಬು ಸೇರಿದಂತೆ ಮೂವರ ವಿರುದ್ಧ ಬಿಹಾರದ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಚಾಕಿಯಾ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋತಿಹಾರಿ ಸದರ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಈ ಹಿನ್ನೆಲೆ ಬಿಹಾರ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಳ್ಳಾರಿಗೆ ಆಗಮಿಸಿದ್ದಾರೆ.

ಚಾಕಿಯಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 324/2021ಕ್ಕೆ ಸಂಬಂಧಿಸಿದಂತೆ ಸುರೇಶ್ ಬಾಬು ಸೇರಿದಂತೆ ಮೂವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ. ನ್ಯಾಯಾಲಯದ ಆದೇಶದಂತೆ ಬಂಧನ ಪ್ರಕ್ರಿಯೆ ಕೈಗೊಳ್ಳಲು ಬಿಹಾರ ಪೊಲೀಸರು ಸ್ಥಳೀಯ ಪೊಲೀಸರ ಸಹಕಾರ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ಮಾಜಿ ಶಾಸಕ ಸುರೇಶ್ ಬಾಬು ಅವರ ಬಂಧನಕ್ಕೆ ಬಿಹಾರ ಪೊಲೀಸರು ಮುಂದಾಗಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಹಿನ್ನೆಲೆ ಸುರೇಶ್ ಬಾಬು ಪರ ವಕೀಲರು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಬಿಹಾರದಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ವಾರಂಟ್ ಜಾರಿಗೊಳಿಸುವ ಸಂಬಂಧ ಸ್ಥಳೀಯ ಪೊಲೀಸರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನ್ಯಾಯಾಲಯಕ್ಕೆ ಹಾಜರಾಗಲು ಸಿದ್ಧ: ಸುರೇಶ್ ಬಾಬು

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಸುರೇಶ್ ಬಾಬು, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ತಾವು ಮತ್ತು ತಮ್ಮ ವಕೀಲರು ನಡೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಬಂಧನಕ್ಕೆ ಬಿಹಾರ ಪೊಲೀಸರು ಬಳ್ಳಾರಿಗೆ ಬಂದ ವಿಷಯ ಗೊತ್ತಾಗುತ್ತಿದ್ದಂತೆಯೇ ಸುರೇಶ್ ಬಾಬು ಅವರು ಬೆಂಗಳೂರಿಗೆ ತೆರಳಿ ವಕೀಲರ ಜೊತೆ ಮುಂದಿನ ನಡೆ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.