ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಅ. 23ರಂದು ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಕೊಪ್ಪಳ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಅ. 23ರಂದು ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದೆ.
ಜಿಲ್ಲೆಯ ಎಲ್ಲ ಮತಗಟ್ಟೆಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸುವ ಜತೆಗೆ, ಮತದಾನದ ದಿನದಂದು ಸಂತೆ, ಜಾತ್ರೆಗಳನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಅ. 21ರಿಂದ 23ರ ವರೆಗೆ ಮದ್ಯ ಮಾರಾಟವನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಆದೇಶ ಹೊರಡಿಸಿದ್ದಾರೆ.ಮತಗಟ್ಟೆಗಳ ಸುತ್ತ ನಿಷೇಧಾಜ್ಞೆ: ಮತದಾನ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಅ. 22ರ ರಾತ್ರಿ 10 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪು ಸೇರುವುದು, ಸಭೆ-ಸಮಾರಂಭ, ಮೆರವಣಿಗೆ ಹಾಗೂ ಚುನಾವಣಾ ಪ್ರಚಾರ ನಡೆಸುವುದನ್ನು ನಿರ್ಬಂಧಿಸಲಾಗಿದೆ. ಮತಗಟ್ಟೆಗಳ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸಂಪೂರ್ಣ ನಿರ್ಬಂಧಿತ ವಲಯವೆಂದು ಘೋಷಿಸಲಾಗಿದ್ದು, ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ, ಘೋಷಣೆ ಕೂಗುವುದು ಹಾಗೂ ಮತದಾರರ ಓಲೈಕೆಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಪ್ರಚೋದನಾತ್ಮಕ ಚಟುವಟಿಕೆ, ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳ ಪ್ರದರ್ಶನ ಹಾಗೂ ದಹನಕ್ಕೂ ನಿಷೇಧ ಹೇರಲಾಗಿದೆ.ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ವಿನಾಯಿತಿ ನೀಡಲಾಗಿದ್ದರೂ, ಚುನಾವಣಾ ನೀತಿ ಸಂಹಿತೆ ಹಾಗೂ ಕಾನೂನು-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಯಮ ಪಾಲಿಸುವುದು ಕಡ್ಡಾಯವಾಗಿದೆ.
ಸಂತೆ, ಜಾತ್ರೆಗಳಿಗೆ ಬ್ರೇಕ್: ಮತದಾನದ ದಿನವಾದ ಅ. 23ರಂದು ಕೊಪ್ಪಳ ಜಿಲ್ಲೆಯಾದ್ಯಂತ ನಡೆಯುವ ಎಲ್ಲ ರೀತಿಯ ಸಂತೆ ಮತ್ತು ಜಾತ್ರೆಗಳನ್ನು ರದ್ದುಪಡಿಸಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ಜನಸಂದಣಿ ನಿಯಂತ್ರಿಸುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಜನಪ್ರತಿನಿಧಿಗಳ ಕಾಯ್ದೆ-1951ರ ಕಲಂ 126ರ ಅಡಿಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.ಮದ್ಯ ಮಾರಾಟ ಸಂಪೂರ್ಣ ನಿಷೇಧ: ಚುನಾವಣೆಯ ಹಿನ್ನೆಲೆಯಲ್ಲಿ ಅ. 21ರ ಅಪರಾಹ್ನ 4 ಗಂಟೆಯಿಂದ ಅ. 23ರ ರಾತ್ರಿ 11 ಗಂಟೆ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 135(ಸಿ) ಹಾಗೂ ಕರ್ನಾಟಕ ಅಬಕಾರಿ ಪರವಾನಗಿಗಳ ನಿಯಮಾವಳಿಗಳ ಅನ್ವಯ ಈ ಆದೇಶ ಜಾರಿಗೊಳಿಸಲಾಗಿದೆ.
ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.