ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಇದು ಜಾತಿ ಚುನಾವಣೆಯಲ್ಲಿ ದೇಶದ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಅವರು ತುಮಕೂರಿನಲ್ಲಿ ಎನ್.ಡಿ.ಎ ಅಭ್ಯರ್ಥಿ ವಿ. ಸೋಮಣ್ಣ ಪರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಡೆದ ರೋಡ್ ಶೋನಲ್ಲಿ 2 ಪಕ್ಷಗಳ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗೆ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದವರು ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿವುದು ಬಿಟ್ಟರೆ ಜನರ ಸಂಕಷ್ಟ ನಿವಾರಣೆಗೆ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಬರದಿಂದ ರೈತರು, ಜನ ತತ್ತರಿಸಿ ಹೋಗಿದ್ದಾರೆ ಅವರ ನೆರವಿಗೆ ಸರ್ಕಾರ ಸ್ಪಂದಿಸಿಲ್ಲ ಎಂದರು.ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳಿಗೆ ಸಾಲ ಮಾಡಿದ ಹಣ, ಜನರ ತೆರಿಗೆ ಹಣ ನೀಡುತ್ತಿದ್ದಾರೆ. ಈ ಸಾಲವನ್ನು ಸಿದ್ದರಾಮಯ್ಯ ತೀರಿಸುವುದಿಲ್ಲ, ರಾಜ್ಯದ ಏಳು ಕೋಟಿ ಜನ ತೀರಿಸಬೇಕಾಗಿದೆ ಎಂದರು.ಮಂಡ್ಯದಿಂದ ತಾವು ಸ್ಪರ್ಧೆ ಮಾಡಿದ್ದು, ತಾವೂ ಸೋಮಣ್ಣ ಜೊತೆಯಲ್ಲಿ ಈ ಬಾರಿ ಲೋಕಸಭೆಯನ್ನು ಪ್ರವೇಶ ಮಾಡುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವಿಬ್ಬರೂ ಸೇರಿ ಸೇರಿ ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿ ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ ಮಾಡುತ್ತೇವೆ, ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಟ 16,500 ರು. ಬೆಂಬಲ ಬೆಲೆ ಕೊಡಿಸುತ್ತೇವೆ. ಈ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆ. ಇದು ಜಾತಿಯ ಚುನಾವಣೆ ಅಲ್ಲ, ಎಲ್ಲಾ ಜಾತಿಯವರೂ ಸೋಮಣ್ಣ ಅವರಿಗೆ ಮತ ನೀಡಿ ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ, ಸೋಮಣ್ಣನವರ ನಾಮಪತ್ರ ಸಲ್ಲಿಕೆಗೆ ಎರಡೂ ಪಕ್ಷಗಳ ಇಷ್ಟೊಂದು ಜನ ಸೇರಿರುವುದು ದೊಡ್ಡ ದಾಖಲೆ, ಇದು ಸೋಮಣ್ಣ ಅವರ ಗೆಲುವಿನ ಮುನ್ಸೂಚನೆ ಎಂದರು.ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಯಾವುದೇ ಜನಪರವಾದ ಯೋಜನೆಯಾಗಲಿ, ಅಭಿವೃದ್ಧಿ ಕಾರ್ಯಗಳಾಗಲಿ ಈ ಸರ್ಕಾರದಿಂದ ಆಗುತ್ತಿಲ್ಲ ಎಂದು ಟೀಕಿಸಿದ ಅವರು, ವಿ.ಸೋಮಣ್ಣ ಅವರು ಜನಪ್ರಿಯ ನಾಯಕ, ಇವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ, ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ದೇಶದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ ಎಂದು ಮನವಿ ಮಾಡಿದರು.ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ಬರಗಾಲ ಬರುತ್ತದೆ. ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ ಸಭೆ ನಡೆಸಿ ಹೊರಬರುತ್ತಿದ್ದಂತೆ ಮಳೆಯಾಯಿತು. ಕಾಂಗ್ರೆಸ್ ಬಂದರೆ ಬರ, ಬಿಜೆಪಿ ಅಧಿಕಾರಕ್ಕೆ ಮಳೆ ಎಂದರು.ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ, ದೇಶದ ಇವತ್ತಿನ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶ ಮುನ್ನಡೆಸಲು ಯೋಗ್ಯ ನಾಯಕ ಬೇಕು, ಭವಿಷ್ಯದ ಜನರಿಗೆ ಕನಸಿನ ಭಾರತ ನಿರ್ಮಾಣ ಮಾಡಬೇಕು ಎಂಬ ದೂರಾಲೋಚನೆಯಿಂದ ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವಾರು ನಾಯಕರು ಮೋದಿರವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಚಿಂತನೆ ಮಾಡಿ ಈ ಚುನಾವಣೆಗೆ ಸಜ್ಜಾಗಿದ್ದಾರೆ. ಇದೇ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಈ ಚುನಾವಣೆಯ ಗೆಲುವಿನೊಂದಿಗೆ ರಾಜ್ಯದಲೂ ಹೊಸ ಶಕೆ ಆರಂಭವಾಗಲಿದೆ. ಇದೇ ಏಪ್ರಿಲ್ ತಿಂಗಳ ೨೬ರಂದು ನಡೆಯುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿ ತಮಗೆ ಮತ ನೀಡುವಂತೆ ಮನವಿ ಮಾಡಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಸಂಸದ ಜಿ.ಎಸ್.ಬಸವರಾಜು, ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‌ಗೌಡ, ಎಂ.ಟಿ.ಕೃಷ್ಣಪ್ಪ, ಸುರೇಶ್‌ಬಾಬು, ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಮಾಜಿ ಸಚಿವರಾದ ಸೊಗಡು ಶಿವಣ್ಣ, ಬಿ.ಸಿನಾಗೇಶ್, ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮೀನಾರಾಯಣ, ಮಸಾಲ ಜಯರಾಂ, ಸುಧಾಕರಲಾಲ್. ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಾ. ಹುಲಿನಾಯ್ಕರ್, ಅನಿಲ್‌ಕುಮಾರ್, ಹುಚ್ಚಯ್ಯ, ಸೇರಿದಂತೆ ಬಿಜೆಪಿ, ಜೆಡಿಎಸ್‌ನ ಹಲವಾರು ನಾಯಕರು ಭಾಗವಹಿಸಿದ್ದರು.