ಹಿಡಿತ ಸಾಧಿಸಲು ಯತ್ನಿಸಿಲ್ಲ: ಬಿ.ವೈ.ವಿಜಯೇಂದ್ರ

| Published : Mar 24 2024, 01:32 AM IST / Updated: Mar 24 2024, 02:54 PM IST

ಸಾರಾಂಶ

ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಪಕ್ಷದ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಿದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ನಮ್ಮ ಮುಂದೆ ಎರಡು ಗುರಿಗಳಿವೆ. ಒಂದನೆಯದ್ದು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬೇಕು. 

ಎರಡನೆಯದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಬೇಕು. ಈ ಎರಡೂ ಉದ್ದೇಶ ಇಟ್ಟುಕೊಂಡು ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. 

ಇದನ್ನು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು.ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸಿದೆ. 

ವರಿಷ್ಠರು ಟಿಕೆಟ್ ಕೊಡುವುದಿಲ್ಲ ಎಂಬ ನಿರ್ಧಾರ ಕೈಗೊಂಡರು. ನಾನು ಪಕ್ಷದ ಕಾರ್ಯಕರ್ತನಾಗಿ ವರಿಷ್ಠರ ಆದೇಶವನ್ನು ಪಾಲನೆ ಮಾಡಿದೆ. 

ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯ ಬಿಜೆಪಿಯ ಕೋರ್ ಕಮಿಟಿಯಲ್ಲಿ ನನ್ನನ್ನು ವಿಧಾನಪರಿಷತ್ ಸದಸ್ಯನಾಗಿ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು. 

ಆದರೆ, ಹೈಕಮಾಂಡ್ ಈ ನಿರ್ಣಯವನ್ನು ಒಪ್ಪಿಕೊಳ್ಳಲಿಲ್ಲ. ಕಾರ್ಯಕರ್ತನಾಗಿ ನಾನು ಹೈಕಮಾಂಡ್ ತೀರ್ಮಾನವನ್ನು ಚಾಚೂ ತಪ್ಪದೆ ಒಪ್ಪಿದೆ ಎಂದು ವಿವರಿಸಿದರು.

ಆ ಸಮಯದಲ್ಲಿ ನನ್ನ ನಿಲುವು ಮತ್ತು ನಡವಳಿಕೆ ಹೇಗಿತ್ತು ಎಂಬುದನ್ನು ಎಲ್ಲರೂ ಗಮನಿಸಿದ್ದಾರೆ. ನನ್ನನ್ನು ಈಗ ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು ಪಕ್ಷದ ವರಿಷ್ಠರು. 

ಆ ವೇಳೆ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಯಾಕೆ ನೇಮಕ ಮಾಡಿದ್ದು ಎಂಬುದನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದರು. 

ಕಳೆದ ಹಲವು ದಿನಗಳಿಂದ ವಿವಿಧ ಮುಖಂಡರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಯನ್ನು ನೋಡುತ್ತಿದ್ದೇನೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಹೆಚ್ಚು ಮತ ಗಳಿಸಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. 

ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಮೋದಿ ಅವರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಮನೆಮನೆಗೆ ತಲುಪಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಇದೇ ವೇಳೆ ವಿಜಯೇಂದ್ರ ಹೇಳಿದರು.

ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ನಿಷ್ಕ್ರಿಯವಾಗಿದೆ. 

ಅದು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಎಚ್ಚತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ ಎಂದರು.

ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಪಕ್ಷ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನೀಲ್‌ಕುಮಾರ್‌, ಪ್ರೀತಂಗೌಡ, ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಕರಾಳ: ಅಶೋಕ್‌

ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ರಾಜಕೀಯ ಪ್ರೇರಿತವಾಗಿದ್ದು, ಭಾರತೀಯ ಒಕ್ಕೂಟ ವ್ಯವಸ್ಥೆ ಮತ್ತು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ರಿಟ್‌ ಅರ್ಜಿ ಸಲ್ಲಿಸಿರುವ ಕ್ರಮದ ವಿರುದ್ಧ ‘ಎಕ್ಸ್‌’ ಖಾತೆಯ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಆರ್‌. ಅಶೋಕ್‌, ‘ಕೈಯಲ್ಲಿ ಆಗದವನು ಮೈ ಪರಚಿಕೊಂಡ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಡವಟ್ಟುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ತೋರಿಸುತ್ತಿದ್ದಾರೆ. 

ಸಿದ್ದರಾಮಯ್ಯ ಅವರ ಈ ನಡೆ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರಾಳ ದಿನ’ ಎಂದಿದ್ದಾರೆ.ಹಿಂದಿನ ಬಿಜೆಪಿ ಸರ್ಕಾರ ಬರ, ಪ್ರವಾಹದ ಸಂದರ್ಭದಲ್ಲಿ ಕೇಂದ್ರದ ನೆರವಿಗೆ ಕಾಯದೆ ರೈತರಿಗೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಿತ್ತು. 

ಆದರೆ, ರೈತರ ಬಗ್ಗೆ ಕಾಳಜಿ ಇಲ್ಲದ ಸಿದ್ದರಾಮಯ್ಯ ಬರ ಪರಿಹಾರ ನೀಡುವಲ್ಲೂ ರಾಜಕೀಯ ಮಾಡುತ್ತಾ, ರೈತರಿಗೆ ದ್ರೋಹ ಮಾಡುತ್ತಿದ್ದಾರೆ. ರೈತರ ಕಣ್ಣೀರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದೇ ಕಾಂಗ್ರೆಸ್‌ ಸರ್ಕಾರಕ್ಕೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. 

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜತೆ ಹೇಗೆ ವ್ಯವಹರಿಸಬೇಕು ಎಂಬುದನ್ನು ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರನ್ನು ನೋಡಿ ಕಲಿಯಬೇಕು. 

ರಾಜಕೀಯಕ್ಕಾಗಿ ಪದೇಪದೇ ಜನರ ಹಿತಾಸಕ್ತಿ ಬಲಿಕೊಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಹಾಗೂ ಇತಿಹಾಸ ಅವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.