ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಯಶಸ್ವಿಗೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 155 ನೇ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮರ ಬದುಕು, ಜೀವನ, ಸಾಧನೆ ವಿಚಾರಧಾರೆಯನ್ನು ವಿದ್ಯಾರ್ಥಿಗಳು ಮತ್ತು ಯುವಜನರಿಗೆ ತಿಳಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಪ್ರಬಂಧ ಸ್ಪರ್ಧೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮುತುವರ್ಜಿ ವಹಿಸಿ, ಸ್ಪರ್ಧೆಯನ್ನು ಯಶಸ್ವಿಗೊಳಿಸಬೇಕು ಎಂದರು.ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರ್ಕಾರಿ ಪ್ರೌಢಶಾಲೆ, ಕಾಲೇಜು ಹಂತದಲ್ಲಿಯೇ ಸ್ಪರ್ಧೆ ಏರ್ಪಡಿಸಿ, ಮುಂಚಿತವಾಗಿ ಸ್ಪರ್ಧೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು. ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 3 ಪ್ರಬಂಧದ ಫಲಿತಾಂಶವನ್ನು ಡಿಡಿಪಿಐ, ಡಿಡಿಪಿಯು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಚಿತ್ರದುರ್ಗ ಸರ್ಕಾರಿ ಕಲಾ ಪ್ರಾಂಶುಪಾಲರು ಸೆಪ್ಟೆಂಬರ್ 6 ರೊಳಗೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದರು.ಸ್ಪರ್ಧೆಯ ನಿಬಂಧನೆಗಳನ್ನು ತಪ್ಪದೆ ಪಾಲಿಸಬೇಕು. ಪ್ರೌಢಶಾಲೆ ವಿಭಾಗ, ಪದವಿಪೂರ್ವ ವಿಭಾಗ, ಪದವಿ - ಸ್ನಾತಕೋತ್ತರ ವಿಭಾಗಕ್ಕೆ ಪ್ರತ್ಯೇಕ ಬಹುಮಾನಗಳಿರುವುದರಿಂದ ಪ್ರಬಂಧಗಳನ್ನುಅತ್ಯಂತ ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಸಬೇಕು ಎಂದು ಸೂಚಿಸಿದರು.
ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡರದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರವುಳ್ಳ ಫಲಿತಾಂಶ ಮತ್ತು ಬಹುಮಾನಕ್ಕೆ ಆಯ್ಕೆಯಾದ ಮೂಲ ಪ್ರಬಂಧಗಳ ಪ್ರತಿಗಳನ್ನು, ಕ್ರೋಢೀಕರಿಸಿ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಪ್ಪದೆ ತಲುಪಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂ ರಾವ್ ಮಾತನಾಡಿ, ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆಗೆ ನಡೆಸಿದ ಪ್ರಯೋಗಗಳು ಎಂಬ ಮೊದಲಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿಜೇತರ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಬೆಂಗಳೂರಿಗೆ ರವಾನಿಸಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಯಶಸ್ವಿಗೊಳಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.ಈ ವೇಳೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್, ಶಿಕ್ಷಣ ಇಲಾಖೆ ಡಿವೈಪಿಸಿ ಸಿ. ಎಸ್ ವೆಂಕಟೇಶ್, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ. ಸಿದ್ರಾಮಚನಗೊಂಡ, ದಾವಣಗೆರೆ ವಿವಿಯ ಡಾ. ಸುಂದರಂ, ಸರ್ಕಾರಿ ಕಲಾ ಕಾಲೇಜಿನ ಡಾ.ವಿ. ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಇದ್ದರು.