ಅರ್ಥಪೂರ್ಣವಾಗಿ ರಾಷ್ಟ್ರೀಯ ಮತದಾನ ದಿನಾಚರಣೆಗೆ ಸೂಚನೆ

| Published : Jan 19 2025, 02:16 AM IST

ಸಾರಾಂಶ

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಷ್ಟೀಯ ಮತದಾನ ದಿನ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ಹೇಳಿದರು.

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಷ್ಟ್ರೀಯ ಮತದಾನ ದಿನ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾನ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಮತದಾನ ದಿನ ತಾಲೂಕು ಮಟ್ಟದಲ್ಲಿ ಆಯಾ ಉಪವಿಭಾಗಧಿಕಾರಿಗಳು, ತಹಸೀಲ್ದಾರರು ಎಲ್ಲ ಮತಗಟ್ಟೆಗಳ ಮಟ್ಟದಲ್ಲಿ ಕಾರ್ಯಕ್ರಮವನ್ನು ಜ. 24 ರಂದು ಜರುಗಿಸಬೇಕು. ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ಮತದಾನ ದಿನ ಜ. 24ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಗುರುಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.ಮತದಾನ ದಿನಾಚರಣೆಯ ಪ್ರಯುಕ್ತ ಮತದಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಹುಕ್ಕೇರಿಮಠ ಮಹಿಳಾ ಕಾಲೇಜಿನಿಂದ ಜಿಲ್ಲಾ ಗುರುಭವನದ ವರೆಗೆ ಪಥ ಸಂಚಲನ ಏರ್ಪಡಿಸುವುದು ಮತ್ತು ಪ್ರತಿ ಕಾಲೇಜಿನಿಂದ 50 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಇಬ್ಬರು ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಲು ಕ್ರಮ ವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಮತದಾನ ದಿನಾಚರಣೆಯ ಪ್ರಯುಕ್ತ ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶಾಲಾ, ಪದವಿ ಪೂರ್ವ ಹಾಗೂ ಪದವಿ ಮಟ್ಟದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಮತ್ತು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸ್ವೀಪ್ ಸಮಿತಿಯ ಮೂಲಕ ಬಹುಮಾನ ವಿತರಿಸಲು ಕ್ರಮ ವಹಿಸಬೇಕು ಎಂದರು.ರಾಷ್ಟ್ರೀಯ ಮತದಾನ ದಿನಾಚರಣೆ ದಿನದಂದು ಉಪ ವಿಭಾಗದ ಎಲ್ಲ ಕ್ಷೇತ್ರದ 2025ರ ಹೊಸದಾಗಿ ಮತದಾರರ ಪಟ್ಟಿಗೆ ಸೇರಿದ ಮತದಾರರಿಗೆ ಗುರುತಿನ ಚೀಟಿ ವಿತರಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಈಗಾಗಲೇ 2025ನೇ ಸಾಲಿನ ಅಂತಿಮ ಮತದಾರರ ಪಟ್ಟಿಯನ್ನು ಜ.6ರಂದು ಜಿಲ್ಲೆಯಾದ್ಯಂತ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ಶಿರಕೋಳ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.