ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ

| Published : Aug 29 2024, 12:55 AM IST

ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಕೇಂದ್ರ ಆರಂಭಕ್ಕೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರವನ್ನು ಮೊದಲ ಹಂತದಲ್ಲಿ ಸವಣೂರು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಗುಣಮಟ್ಟದ ಹೆಸರುಕಾಳು ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇಡಿಕೆಗೆ ಅನುಗುಣವಾಗಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಿದರು.

ಬೆಂಬಲ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳು ಪ್ರತಿ ಕ್ವಿಂಟಲ್‌ಗೆ ₹೮,೬೮೨ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಆ. ೨೪ರಿಂದ ೪೫ ದಿನಗಳ ವರೆಗೆ ರೈತರ ನೋಂದಣಿ ಆರಂಭಿಸಿ, ೯೦ ದಿನಗಳ ವರೆಗೆ ಖರೀದಿಸಬೇಕು. ಖರೀದಿ ಕೇಂದ್ರದ ಮುಂದೆ ಬ್ಯಾನರ್ ಅಳವಡಿಸಬೇಕು. ಕರಪತ್ರಗಳ ಮೂಲಕ ರೈತರಿಗೆ ಖರೀದಿ ಕೇಂದ್ರದ ಮಾಹಿತಿ ನೀಡಲು ಸೂಚನೆ ನೀಡಿದರು.

ಹೆಸರುಕಾಳು ಖರೀದಿ ಕೇಂದ್ರವನ್ನು ಸವಣೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸವಣೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ರೈತರಿಂದ ಖರೀದಿಸಲ್ಪಡುವ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳು ಗುರುತಿಸಲು ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿಯನ್ನು ಖರೀದಿ ಕೇಂದ್ರಗಳಿಗೆ ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಬಲ ಬೆಲೆಯಡಿ ಹೆಸರುಕಾಳು ಪ್ರತಿ ರೈತರಿಂದ ಹೆಸರುಕಾಳು ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ ಎರಡು ಕ್ವಿಂಟಲ್‌ನಂತೆ ಹಾಗೂ ಪ್ರತಿಯೊಬ್ಬ ರೈತರಿಂದ ೧೦ ಕ್ವಿಂಟಲ್ ಖರೀದಿಗೆ ಅವಕಾಶವಿದೆ. ಹೆಸರುಕಾಳು ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೫೮೫ ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬೆಳೆಯಲಾಗಿದೆ. ಸವಣೂರು ತಾಲೂಕಿನಲ್ಲಿ ೪೨೦ ಹೆಕ್ಟೇರ್ ಹಾಗೂ ರಾಣಿಬೆನ್ನೂರು ತಾಲೂಕಿನಲ್ಲಿ ೯೦ ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಉತ್ಪನ್ನ ಬೆಳೆಯಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.