ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

| Published : Dec 02 2024, 01:15 AM IST

ಸಾರಾಂಶ

ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿರಾಜಪೇಟೆ- ಮಡಿಕೇರಿ ಮಾರ್ಗದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಕೂಡಲೇ ಕೈಗೊಳ್ಳಬೇಕು ಎಂದು ಶಾಸಕ ಪೊನ್ನಣ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಳೆಗಾಲ ಮುಗಿದಿರುವ ಹಿನ್ನೆಲೆ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ನವೆಂಬರ್ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಈ ಐದು ತಿಂಗಳು ಸೂಕ್ತವಾಗಿದ್ದು, ಈ ಹಿನ್ನೆಲೆ ಮಳೆಹಾನಿ ಕಾಮಗಾರಿಗಳು ಸೇರಿದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ-ಮಡಿಕೇರಿ ಮಾರ್ಗದ ರಸ್ತೆಯ ಗುಂಡಿ ಮುಚ್ಚುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ ಸರ್ಕಾರ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಎರಡು ವಿಧಾನಸಭಾ ಕ್ಷೇತ್ರಕ್ಕೆ ತಲಾ 20 ಕೋಟಿ ರು. ಬಿಡುಗಡೆ ಮಾಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಧ್ವನಿಗೂಡಿಸಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲೆಯ ಗುಂಡಿ ಬಿದ್ದಿರುವ ರಸ್ತೆಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಎಂಜಿನಿಯರ್‌ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ ಮಾದಾಪುರ, ಜಂಬೂರು ರಸ್ತೆ ಅಭಿವೃದ್ಧಿಗೆ ತಲಾ 50 ಲಕ್ಷ ರು. ಬಿಡುಗಡೆಯಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಇದುವರೆಗೆ ಕಾಮಗಾರಿ ಆರಂಭಿಸಿಲ್ಲ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಮಳೆಗಾಲ ಮುಗಿದಿದೆ, ಇಂತಹ ಸಂದರ್ಭದಲ್ಲಿಯೂ ಕೆಲಸ ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಗುತ್ತಿಗೆ ಪಡೆದು ಕಾಮಗಾರಿಗೆ ಚಾಲನೆ ನೀಡಿದ್ದರೂ ಸಹ ಕಾಮಗಾರಿಗೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.

ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ವಿಳಂಬ ಮಾಡಿದ್ದಲ್ಲಿ ತಮ್ಮ ವಿರುದ್ಧವೇ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.

ಭಾಗಮಂಡಲ-ಕರಿಕೆ ರಸ್ತೆ ಅಭಿವೃದ್ಧಿಗೆ 12 ಕೋಟಿ ರು. ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಹೇಳಿದರು.

ಸಭೆಯಲ್ಲಿ ಉಸ್ತುವಾರಿ ಸಮಿತಿ ಸದಸ್ಯರಾದ ಎ.ಮಂಜು, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

ಹಾಡಿ ನಿವಾಸಿಗಳಿಗೆ ಇನ್ನೂ ಸಿಗದ ಆಧಾರ್!

ಜಿಲ್ಲೆಯ ಹಾಡಿಗಳಲ್ಲಿ ವಾಸಿಸುವ ಸುಮಾರು 26 ಸಾವಿರ ಜನರಲ್ಲಿ 22 ಸಾವಿರ ಜನರಿಗೆ ಆಧಾರ್ ಕಾರ್ಡ್ ನೀಡಲಾಗಿದೆ. ಉಳಿದಂತೆ 4 ಸಾವಿರ ಜನರಿಗೆ ಆಧಾರ್ ಕಾರ್ಡ್ ನೀಡಬೇಕಿದೆ ಎಂದು ಎಸ್.ಹೊನ್ನೇಗೌಡ ಮಾಹಿತಿ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೆಶಕರಾದ ರಂಗಧಾಮಪ್ಪ ಅವರು ಅವರು ಜಿಲ್ಲೆಯಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ಆಧಾರ್ ಗುರುತಿನ ಚೀಟಿ ಮಾಡಿಸಬೇಕಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಹಾಡಿಗಳಲ್ಲಿ ಜೇನುಕುರುಬ, ಬೆಟ್ಟಕುರುಬ, ಕಾಡುಕುರುಬ, ಸೋಲಿಗ, ಎರವ ಮತ್ತಿತರ ಆದಿವಾಸಿಗಳು ವಾಸಿಸುತ್ತಿದ್ದು, ಇವರಿಗೆ ಆಧಾರ್ ಕಾರ್ಡ್ ಮಾಡಿಸಬೇಕಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು 5 ತಾಲೂಕು ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ನೋಂದಣಿಗೆ ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ ಆಧಾರ್ ಕಾರ್ಡ್ ಇಲ್ಲದಿರುವ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳು ಸಿಗುವುದಿಲ್ಲ. ಆದ್ದರಿಂದ ಆಧಾರ್ ಮಾಡಿಸಲು ಕ್ಯಾಂಪ್ ಗಳನ್ನು ಮಾಡಬೇಕೆಂದು ಸೂಚಿಸಿದರು.

ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ : ಮಂತರ್

2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ವಸತಿ ಕಲ್ಪಿಸಲಾಗಿದ್ದು, ಈ ಸಂಬಂಧ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ನೀಡಲಾಗಿದ್ದು, ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ಮಾಹಿತಿ ನೀಡಿದರು.

ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಎಷ್ಟೋ ಸಂತ್ರಸ್ತರಿಗೆ ಇನ್ನೂ ಸಹ ಮನೆ ಸಿಕ್ಕಿಲ್ಲ. ಆದ್ದರಿಂದ ಮನೆ ನೀಡುವಂತಾಗಬೇಕು ಎಂದರು.

ಇನ್ಫೋಸಿಸ್ ವತಿಯಿಂದಲೂ ಸಹ 200 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದ್ದು, ಈ ಮನೆಗಳನ್ನು ಸಹ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಹೆಚ್ಚಿನ ಮಳೆ ಸಂದರ್ಭದಲ್ಲಿ ಪ್ರವಾಹ ಉಂಟಾಗಿ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದವರು ತೊಂದರೆಗೆ ಸಿಲುಕುತ್ತಿದ್ದು, ಇವರಿಗೆ ನಿವೇಶನ ನೀಡುವ ಸಂಬಂಧ ಪರಿಶೀಲಿಸಲಾಗಿದೆ. ಆದರೆ ಹತ್ತಿರದಲ್ಲಿ ಜಾಗ ಕೇಳುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.

ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕರಡಿಗೋಡು ಗ್ರಾಮಸ್ಥರಿಗೆ ನಿವೇಶನ ನೀಡುವ ಸಂಬಂಧ ಆದ್ಯತೆ ಮೇಲೆ ಕ್ರಮವಹಿಸುವಂತೆ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್‌ಗೌಡ ತೆಪ್ಪದಕಂಡಿ ಬಳಿ ಗ್ರಾಮಸ್ಥರಿಗೂ ನಿವೇಶನ ಒದಗಿಸುವಂತಾಗಬೇಕು ಎಂದು ಹೆಳಿದರು.

‘ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲೆಯಲ್ಲಿನ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತಾಗಲು ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಗುರುತಿಸಲಾಗುತ್ತಿದ್ದು, ನಿವೇಶನ ಗುರುತಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು. ನಂತರ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಸುರೇಶ್ ತುಂಬಾ ಜನರಿಗೆ ದಾಖಲಾತಿ ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪರಿಹಾರ ಒದಗಿಸಬೇಕು ಎಂದು ಸಲಹೆ ಮಾಡಿದರು.

ಸಮಿತಿ ಸದಸ್ಯರಾದ ಎಚ್.ಎಂ.ಕಾವೇರಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಾಫಿ ತೋಟಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಕುಟುಂಬಗಳಿಗೆ ನಿವೇಶನ ಒದಗಿಸುವಂತಾಗಬೇಕು ಎಂದು ಒತ್ತಾಯಿಸಿದರು.

ಕಾಮಗಾರಿಗೆ ತೊಂದರೆ ಕೊಡಬೇಡಿ : ಪೊನ್ನಣ್ಣ

ಜಿಲ್ಲೆಯ ಗಿರಿಜನ ಹಾಡಿಗಳಲ್ಲಿ ವಾಸಿಸುವ ಆದಿವಾಸಿಗಳಿಗೆ ಒಂದು ಹೆಕ್ಟೇರ್ ಒಳಗಿನ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಅಂಗನವಾಡಿ ಮತ್ತಿತರ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ಮುಖ್ಯಮಂತ್ರಿ ಅವರು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ಆದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದು ಏಕೆ ಎಂದು ಎ.ಎಸ್.ಪೊನ್ನಣ್ಣ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡರು.

ಆದಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ತೊಂದರೆ ನೀಡಿದರೆ ತಕ್ಷಣವೇ ಗಮನಕ್ಕೆ ತರಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಎ.ಎಸ್.ಪೊನ್ನಣ್ಣ ಸೂಚಿಸಿದರು.