ಕನ್ನಡಪ್ರಭ ವಾರ್ತೆ ಬಾಗಲಕೋಟೆ ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಬಾದಾಮಿ ತಾಲೂಕಿನ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಗುರುವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಬಾದಾಮಿ ತಾಲೂಕಿನ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಗುರುವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಾದಾಮಿ ತಾಲೂಕು ಆಸ್ಪತ್ರೆ ಹಾಗೂ ಕುಟುಕನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದರು. ಬಾದಾಮಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಪರ್ಯಾಯವಾಗಿ ಯುಪಿಎಸ್, ಇನ್ವರ್ಟರ್ ಅಥವಾ ಜನರೇಟರ್ ವ್ಯವಸ್ಥೆಯೂ ಇಲ್ಲದಿರುವುದು ಸಿಇಒ ಅವರ ಗಮನಕ್ಕೆ ಬಂದಿತು. ಇದರಿಂದ ಒಳರೋಗಿಗಳು ಹಾಗೂ ತುರ್ತು ಚಿಕಿತ್ಸೆಗೆ ಆಗಮಿಸಿದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಕಂಡ ಅವರು, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಕೆಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟುಕನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಈ ವೇಳೆ ಶಾಲಾ ಆವರಣ ಹಾಗೂ ಆಟದ ಮೈದಾನವನ್ನು ಪರಿಶೀಲಿಸಿದರು. ಶಾಲಾ ಮೈದಾನವು ಗಿಡ-ಗಂಟಿಗಳಿಂದ ಆವೃತ್ತವಾಗಿದ್ದು, ಕಸದಿಂದಲೇ ಕೂಡಿತ್ತು. ಒಂದು ರೀತಿಯಲ್ಲಿ ಅಸ್ವಚ್ಛವಾಗಿರುವುದು ಕಂಡುಬಂದಿತು. ಅಲ್ಲದೆ, ಆವರಣದಲ್ಲಿ ದನ-ಕರುಗಳು ಅಡ್ಡಾಡುತ್ತಿರುವುದು ಹಾಗೂ ಸ್ಥಳೀಯರು ಮೈದಾನವನ್ನು ಶೌಚಾಲಯವಾಗಿ ಬಳಸುತ್ತಿರುವುದೂ ಕಂಡುಬಂದಿತು. ಮಕ್ಕಳಿಗೆ ಸುರಕ್ಷಿತ ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶಾಲೆಯ ಮುಖ್ಯೋಪಾಧ್ಯಾಯರು, ಬಾದಾಮಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ ನೋಟಿಸ್ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ ಗಜಾನನ ಬಾಲೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಶಾಲಾ ಮಕ್ಕಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶೋಕಾಸ್ ನೋಟಿಸ್ ಪಡೆದಿರುವ ಅಧಿಕಾರಿಗಳು ನಿಗದಿತ ಅವಧಿಯೊಳಗೆ ತಮ್ಮ ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಕಂಡುಬಂದಿರುವ ಲೋಪಗಳನ್ನು ತಕ್ಷಣ ಸರಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.