ಹಿಂದಿನ ಕೆಡಿಪಿ ಸಭೆಯಲ್ಲಿ ಕೇಳಲಾಗಿದ್ದ ಅನುಪಾಲನಾ ವರದಿ ಸಲ್ಲಿಸದಿರುವುದು ಹಾಗೂ ಅದರ ಬಗ್ಗೆ ಸಮರ್ಪಕ ಮಾಹಿತಿ ನೀಡಲು ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕುಂದಗೋಳ:

ಕಳೆದ ಬಾರಿ ಕೇಳಲಾಗಿದ್ದ ಮಾಹಿತಿ ಹಾಗೂ ಸಭೆಗೆ ಅಧಿಕಾರಿಗಳು ಗೈರಾಗಿದ್ದರಿಂದ ಆಕ್ರೋಶಗೊಂಡ ಶಾಸಕ ಎಂ.ಆರ್‌. ಪಾಟೀಲ, ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ತಾಪಂ ಇಒ ರೇಖಾ ಗಡ್ಡದಗೆ ಸೂಚಿಸಿದ ಘಟನೆ ಬುಧವಾರ ತಾಲೂಕು ಪಂಚಾಯಿತಿಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಡೆಯಿತು.

ಹಿಂದಿನ ಸಭೆಯಲ್ಲಿ ಕೇಳಲಾಗಿದ್ದ ಅನುಪಾಲನಾ ವರದಿ ಸಲ್ಲಿಸದಿರುವುದು ಹಾಗೂ ಅದರ ಬಗ್ಗೆ ಸಮರ್ಪಕ ಮಾಹಿತಿ ನೀಡಲು ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆ ಸೇರಿದಂತೆ ವರದಿ ಸಲ್ಲಿಸದ ಹಾಗೂ ಸಭೆಗೆ ಗೈರಾದ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ತಾಲೂಕಿನ ಹಲವು ಪ್ರಮುಖ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ತಾಲೂಕಿನ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ₹ 56 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕರು, ಹೊಸ ವಿದ್ಯುತ್ ಮೀಟರ್ ಅಳವಡಿಕೆಗೆ ₹15 ಸಾವಿರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಹೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

ಕೆಡಿಪಿ ಸದಸ್ಯ ವೆಂಕನಗೌಡ ಪಾಟೀಲ್ ಮಾತನಾಡಿ, ಇಲಾಖೆಯ ಅಧಿಕೃತ ಸಿಬ್ಬಂದಿ ಬದಲಾಗಿ ಖಾಸಗಿ ವ್ಯಕ್ತಿಗಳು ಮೀಟರ್ ರೀಡಿಂಗ್ ಕಾರ್ಯಕ್ಕೆ ತೆರಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯಾವುದೇ ಅವಘಡ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಮುಂದಿಟ್ಟರು.

ತಾಲೂಕಿನ ಮೂರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಅತಿಥಿ ಶಿಕ್ಷಕರನ್ನು ಕೇವಲ ಚಿಕ್ಕಿ ಹಾಗೂ ಬಾಳೆಹಣ್ಣು ವಿತರಿಸುವ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬ ಗಂಭೀರ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಈ ಕುರಿತು ತಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ಹೆಚ್ಚಾಗುತ್ತಿರುವುದು, ಎಲ್ಲೆಂದರಲ್ಲಿ ಕಸ ಹಾಗೂ ತ್ಯಾಜ್ಯದ ರಾಶಿ, ಪಪಂ ನಿರ್ಲಕ್ಷ್ಯ ಹಾಗೂ ಸವಾಯಿ ಗಂಧರ್ವ ಭವನದ ದುಸ್ಥಿತಿಯ ಬಗ್ಗೆ ಸದಸ್ಯರು ಸಭೆಯ ಗಮನ ಸೆಳೆದರು. ಈ ವಿಷಯಗಳಲ್ಲಿ ತಕ್ಷಣ ಕ್ರಮಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗುವುದು ಎಂದು ಶಾಸಕರು ಎಚ್ಚರಿಸಿದರು.

ಸಭೆಯಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ನಿಯಂತ್ರಣ, ರೈತರಿಗೆ ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ತಲುಪಿಸುವುದು, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.

ಸಭೆಯಲ್ಲಿ ತಹಸೀಲ್ದಾರ್ ರಾಜು ಮಾವರಕರ, ತಾಪಂ ಇಒ ರೇಖಾ ಗಡ್ಡದ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ನೆಹರು ಪಾಟೀಲ, ಕೆಡಿಪಿ ಸದಸ್ಯರಾದ ವೆಂಕನಗೌಡ ಪಾಟೀಲ್, ಮಲ್ಲೇಶ ಬೆಳವಡಿ, ಈರಮ್ಮ ಬಾರಕೇರ, ಹುಸೇನ ಹುಬ್ಬಳ್ಳಿ, ರಾಘವೇಂದ್ರ ಕುಸುಗಲ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳಿದ್ದರು.