ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ: ಸಚಿವ ಮಧುಬಂಗಾರಪ್ಪ

| Published : Dec 01 2024, 01:34 AM IST

ಸಾರಾಂಶ

ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಡೆಸಿದರು. ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಇದ್ದರು.

ಅಧಿಕಾರಿಗಳು ಭಾಗಿ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿ ಅಥವಾ ಅರಣ್ಯ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಹಾಗೂ ನೋಟಿಸ್ ನೀಡಿ ಆತಂಕಕ್ಕೀಡು ಮಾಡದಂತೆ ಈಗಾಗಲೇ ಸಂಬಂಧಿಸಿದ ಇಲಾಖಾ ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಪಂ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಸೂಚನೆ ಮೀರಿಯೂ ಸಹಿತ ರೈತರನ್ನು ಒಕ್ಕಲೆಬ್ಬಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅಂತಹ ಅಧಿಕಾರಿ, ಸಿಬ್ಬಂಧಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅನ್ನಭಾಗ್ಯ, ಗೃಹಭಾಗ್ಯ ಮತ್ತಿತರ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ನೀಡಲಾಗುವ ಸಹಾಯ ಧನವನ್ನು ಬ್ಯಾಂಕ್‌ ವ್ಯವಸ್ಥಾಪಕರು ಫಲಾನುಭವಿಗಳು ಮಾಡಿರುವ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ. ಬ್ಯಾಂಕುಗಳ ಶಾಖಾ ವ್ಯವಸ್ಥಾಪಕರು ಫಲಾನುಭವಿಗಳ ಗಮನಕ್ಕೆ ಬಾರದೆ ಹಣ ಕಟಾವು ಮಾಡಿಕೊಳ್ಳುವುದು ಸರಿಯಲ್ಲ. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಯ ಆಡಳಿತ ವ್ಯವಸ್ಥೆ, ವೈದ್ಯರು ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿ ಬರುತ್ತಿವೆ. ಅಲ್ಲದೇ ಅಲ್ಲಿನ ಯಂತ್ರೋಪಕರಣಗಳು ಬಳಕೆಯಾಗದೆ ಹಾಗೆಯೇ ಉಳಿದಿವೆ ಎಂದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳಿಗೆ ಭಾರೀ ಪ್ರಮಾಣದ ಶುಲ್ಕ ವಿಧಿಸಲಾಗುತ್ತಿದೆ. ಸ್ಕ್ಯಾನಿಂಗ್ ಸೇರಿ ಮತ್ತಿತರ ತಪಾಸಣೆಗಳನ್ನು ತಕ್ಷಣವೇ ಮಾಡದೆ ತಿಂಗಳುಗಳು ಕಾಲಾವಕಾಶ ನೀಡಲಾಗುತ್ತಿದೆ. ವಾಂತಿ-ಭೇದಿಯಂತಹ ಸಾಮಾನ್ಯ ಕಾಯಿಲೆಗಳಿಗೆ ಉಚಿತವಾಗಿ ದೊರೆಯಬೇಕಾದ ಔಷಧಗಳು ಲಭ್ಯವಾಗುತ್ತಿಲ್ಲ. ಈ ಕುರಿತು ಇಲ್ಲಿನ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ಕರೆಯುವಂತೆ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಈ ಸಂಬಂಧ ಸ್ಥಳೀಯ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡಿದ ನಂತರ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿ ಅಧಿವೇಶನದಲ್ಲಿ ಇಲ್ಲಿನ ಮುಖ್ಯ ಅಧಿಕಾರಿ-ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿ, ಆರೋಗ್ಯ ಮತ್ತು ಉನ್ನತ ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದ ಕಾರ್ಯ ಆರಂಭಗೊಂಡಿತ್ತು. ಆದರೆ ಈ ಕಟ್ಟಡ ಸ್ಥಳದ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಶೀಘ್ರದಲ್ಲಿ ಇತ್ಯರ್ಥಗೊಂಡು ಕಟ್ಟಡ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸ್ಪಷ್ಟನೆ ನೀಡಿದರು.

ಶಾಸಕ ಆರಗ ಜ್ಞಾನೇಂದ್ರ ಅವರು ಮಾತನಾಡಿ, ತೀರ್ಥಹಳ್ಳಿ ತಾಲೂಕಿನ ಶಾಲೆಯೊಂದರಲ್ಲಿನ ಶಿಕ್ಷಕರಿಬ್ಬರ ದುರ್ವರ್ತನೆ ಹದ್ದು ಮೀರಿದ್ದು, ಇದರಿಂದಾಗಿ ತಾಲೂಕು ಹಾಗೂ ಶಿಕ್ಷಣ ಇಲಾಖೆಗೆ ಅಗೌರವವಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಯಾವುದೇ ಕ್ರಮ ವಹಿಸುತ್ತಿಲ್ಲ. ಅಂತಹ ಶಿಕ್ಷಕರನ್ನು ತಮ್ಮ ಕಚೇರಿಗೆ ವರ್ಗಾಯಿಸಿಕೊಂಡು ತಮ್ಮ ಅಭಿಮಾನ ಪ್ರದರ್ಶಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವಾರದೊಳಗಾಗಿ ದುರ್ವರ್ತನೆ ತೋರುವ ಶಿಕ್ಷಕರ ಕ್ರಮ ಕೈಗೊಂಡು ವರದಿ ನೀಡುವಂತೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಾಹನ ಒದಗಿಸುವಂತೆ ಉಪನಿರ್ದೇಶಕರಿಗೆ ಸಚಿವರು ಸೂಚಿಸಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ನಿಯಮಾನುಸಾರ ಅಲಿನೇಷನ್ ನಂತರ ಕಂದಾಯ ಭೂಮಿ ವಸತಿ ಉದ್ದೇಶಕ್ಕಾಗಿ ಪರಿವರ್ತನೆಗೊಂಡಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಇನ್ನೂ ಯಾವುದೇ ಬದಲಾವಣೆಗಳಾಗದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಕಾರ್ಯ ಪ್ರವೃತ್ತರಾಗಬೇಕು. ನಗರದಲ್ಲಿನ ಮುಜರಾಯಿ ಹಾಗೂ ಖಾಸಗಿ ದೇವಸ್ಥಾನಗಳ ಆಸ್ತಿಯ ಕುರಿತು ಸರ್ಕಾರಿ ದಾಖಲೆಗಳಲ್ಲಿ ಅಳತೆ ನಮೂದಾಗಿರುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ, ಆರೋಗ್ಯ ಸೇವೆ ಒದಗಿಸುವ ಆಂಬ್ಯಲೆನ್ಸ್‌ ವಾಹನಗಳ ಸಿಬ್ಬಂದಿ ಮತ್ತು ಖಾಸಗಿ ಆಸ್ಪತ್ರೆ ವೈದ್ಯಾಧಿಕಾರಿಗಳ ನಡುವಿನ ಹೊಂದಾಣಿಕೆಯಿಂದಾಗಿ ರೋಗಿಗಳಿಗೆ ಅತೀವ ತೊಂದರೆಯಾಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಸಚಿವರನ್ನು ಒತ್ತಾಯಿಸಿದರು.

ಸಭೆಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಶ್‌ ಬಾನು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗಡೆ, ಎಂಎಡಿಬಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಡಿ.ರಾಮಚಂದ್ರ, ಗ್ಯಾರಂಟಿ ಸಮಿತಿ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಚಂದ್ರಭೂಪಾಲ, ಜಿಪಂ ಸಿಇಒ ಎನ್.ಹೇಮಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ, ಎಡಿಸಿ ಸಿದ್ಧಲಿಂಗ ರೆಡ್ಡಿ, ಎಸಿ ಯತೀಶ್, ಸತ್ಯನಾರಾಯಣ್, ಜಿಪಂ ಉಪಕಾರ್ಯದರ್ಶಿ ಸುಜಾತಾ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.