ಸಾರಾಂಶ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಡೀಸಿ ಶಿಲ್ಪಾನಾಗ್ ಹಾಗೂ ಮೈಸೂರು ಡೀಸಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಡೀಸಿ ಶಿಲ್ಪಾನಾಗ್ ಹಾಗೂ ಮೈಸೂರು ಡೀಸಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಪ್ರವಾಸಿಮಂದಿರದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತ ಪೂರ್ವ ಸಿದ್ದತಾ ಸಭೆಯಲ್ಲಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾತನಾಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಮೈಸೂರು ಜಿಲ್ಲಾ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ. ಈ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ದೃಢೀಕರಣವನ್ನು ಮಾ.6 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಎರಡೂ ಜಿಲ್ಲೆಯ ಗಡಿಭಾಗಗಳಲ್ಲಿ ಅಂತರ್‌ರಾಜ್ಯ ಚೆಕ್‍ಪೋಸ್ಟ್ ಗುರುತಿಸಬೇಕಿದೆ. ಉಭಯ ಜಿಲ್ಲೆಗಳ ಅಧಿಕಾರಿಗಳು ಈ ಕಾರ್ಯವನ್ನು ಕೈಗೊಂಡು ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಬೇಕಿದೆ. ಜಿಲ್ಲೆಯಿಂದ ಆಗಮಿಸುವ ಹಾಗೂ ನಿರ್ಗಮಿಸುವ ವಾಹನಗಳನ್ನು ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ಚೆಕ್‍ಪೋಸ್ಟ್ ಇರುವ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಗಡಿ ರಾಜ್ಯಗಳಿಂದ ಅಕ್ರಮ ಮದ್ಯ, ಹಣ, ಇತರೆ ಮಾದಕ ವಸ್ತುಗಳು ಸಾಗಾಣಿಕೆಯಾಗದಂತೆ ಕಟ್ಟೆಚ್ಚೆರ ವಹಿಸಬೇಕಿದೆ. ಗಡಿಭಾಗಗಳಲ್ಲಿ ಅರಣ್ಯ ಪ್ರದೇಶಗಳು ಹೆಚ್ಚಿರುವುದರಿಂದ ತೀವ್ರ ನಿಗಾ ಇಡಬೇಕಿದೆ. ಅಲ್ಲದೇ ಅರಣ್ಯದ ಅಂಚಿನಲ್ಲಿ ಬರುವ ನದಿ ಪಾತ್ರಗಳಲ್ಲಿ ತೆಪ್ಪಗಳ ಮೂಲಕ ಸಾಗಿಸುವ ವಸ್ತುಗಳನ್ನು ಪರಿಶೀಲಿಸಬೇಕಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ತಂಡಗಳನ್ನು ರಚಿಸಿ ವರದಿ ಪಡೆದುಕೊಳ್ಳಬೇಕಿದೆ ಎಂದರು. ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಣೆಗೆ ಹೆಚ್ಚುವರಿ ತಂಡಗಳನ್ನು ನಿಯೋಜನೆ ಮಾಡಬೇಕು. ಈ ತಂಡಗಳು ಪ್ರತಿದಿನ ಬೇರೆ ಬೇರೆ ಸ್ಥಳಗಳಲ್ಲಿ ತೆರಳಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಚೆಕ್ ಪೋಸ್ಟ್ ನಿರ್ಮಿಸುವಾಗ ಶಾಮಿಯಾನ ಬದಲು ಸುಭದ್ರವಾದ ಶೀಟ್‍ಗಳನ್ನು ಬಳಸಿ ನಿಮಾಣ ಮಾಡಬೇಕು. ಕುಡಿಯುವ ನೀರು, ಶೌಚಾಲಯದಂತಹ ಮೂಲ ಸೌಕರ್ಯಗಳು ಇರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎರಡು ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗುತ್ತದೆ. ಚುನಾವಣಾ ಕಾರ್ಯಕ್ಕೆ ನಿಯೋಜಿತವಾಗುವ ತಂಡಗಳು ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಹೊಣೆಗಾರಿಕೆಯಿಂದ ವಹಿಸಿದ ಕೆಲಸಗಳನ್ನು ನಿರ್ವಹಿಸಬೇಕು ಎಂದು ಡೀಸಿಗಳಾದ ಶಿಲ್ಪಾನಾಗ್ ಹಾಗೂ ಮೈಸೂರು ಡೀಸಿ ಡಾ.ಕೆ.ವಿ. ರಾಜೇಂದ್ರ ಸೂಚನೆ ನೀಡಿದರು. ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು, ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ರಮೇಶ್ ಕುಮಾರ್, ಚಾಮರಾಜನಗರ ಜಿಲ್ಲೆಯ ಎಡಿಸಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್,, ಉಭಯ ಜಿಲ್ಲೆಗಳ ತಹಸೀಲ್ದಾರರು, ಸಹಾಯಕ ಚುನಾವಣಾಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅರಣ್ಯ, ಅಬಕಾರಿ, ಪೊಲೀಸ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.