ಸಾರಾಂಶ
ನರಸಿಂಹರಾಜಪುರ, ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ
ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಖಾಂಡ್ಯ, ಬಾಳೆಹೊನ್ನೂರು ಭಾಗದಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗುಣಮಟ್ಟದ ಕಾಮಗಾರಿ ಕೈಗೊಂಡು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿ, ಶೃಂಗೇರಿ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಗುರುವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಯಿತು. ಶೃಂಗೇರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ ಗುಂಡಿ ಮುಚ್ಚಲು ₹4.50 ಕೋಟಿ, ಅತಿವೃಷ್ಟಿಯಿಂದ ಹಾನಿ ಗೊಳಗಾದ ಸ್ಥಳಗಳನ್ನು ಪುನರ್ ಸ್ಥಾಪಿಸಲು ₹11ಕೋಟಿ ಮಂಜೂರಾಗಿದೆ. ಇದಲ್ಲದೆ ಗ್ರಾಮೀಣ ರಸ್ತೆ, ಮೋರಿ, ಭೂ ಕುಸಿತವಾದ ಪ್ರದೇಶಗಳಲ್ಲಿ ಹೊಸದಾಗಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸಿ ₹15 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ರಸ್ತೆಗುಂಡಿ ಮುಚ್ಚುವ ಕಾಮಗಾರಿ ಜತೆಗೆ ರಸ್ತೆ ಬದಿಯಲ್ಲಿ ಜಂಗಲ್ ಕ್ಲಿಯರೆನ್ಸ್ ಮಾಡಲು, ಮುಖ್ಯ ರಸ್ತೆ ಬದಿಯಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಲು ಸೂಚಿಸಲಾಗಿದೆ. ಒಂದು ವೇಳೆ ಮಳೆ ಬಂದರೆ ಮಳೆ ನಿಂತ ಮೇಲೆ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿ ಸೂಚಿಸಲಾಗಿದೆ.
ರಸ್ತೆ ಗುಂಡಿ ಮುಚ್ಚುವಾಗ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ರಸ್ತೆ ಸಂಪೂರ್ಣ ಹಾಳಾದ ಸ್ಥಳದಲ್ಲಿ ಮರು ಡಾಂಬರೀ ಕರಣ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕರು ರಸ್ತೆ ಕಾಮಗಾರಿ ನಡೆಯುವಾಗ ಅದನ್ನು ಪರಿಶೀಲಿಸಬೇಕು. ಒಂದು ವೇಳೆ ಕಳಪೆ ಗುಣಮಟ್ಟದ ಕಾಮಗಾರಿ ಕೈಗೊಂಡರೆ ಗಮನಕ್ಕೆ ತರಬೇಕು. ಕಳಪೆ ಕಾಮಗಾರಿ ಕೈಗೊಂಡವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು ಎಂದರು.