ಸಾರಾಂಶ
29ರಂದು ವಿವಿಧ ಇಲಾಖೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜಿಲ್ಲಾಧಿಕಾರಿ ದಿವ್ಯಪ್ರಭು ಅಧ್ಯಕ್ಷತೆಯಲ್ಲಿ ಸಭೆ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಅ. 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಹಾಗೂ ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ತ್ರಿ ಸಮಿತಿ ಸದಸ್ಯರು, ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.
ಈ ಕುರಿತು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ 20 ಕೇಂದ್ರಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದೆ. ಒಟ್ಟು 7800 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಜಾಗರೂಕತೆ ವಹಿಸಬೇಕು. ಪರೀಕ್ಷಾ ಕೇಂದ್ರ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಶೈಕ್ಷಣಿಕ ಪರೀಕ್ಷೆಗಳಿಗಿಂತಲೂ ನೇಮಕಾತಿ ಪರೀಕ್ಷೆಗಳು ಭಿನ್ನವಾಗಿರುತ್ತವೆ. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾದ ಅಧಿಕಾರಿಗಳನ್ನು ಹೊರತು ಪಡಿಸಿ ಅನ್ಯ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಪರೀಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಹೇಳಿದರು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳು ಮುಂಚೆ ಸೂಕ್ತವಾಗಿ ತಪಾಸಣೆ ನಡೆಸಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ವಸ್ತ್ರ ಸಹಿಂತೆಯನ್ನು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಲೋಹದ ಆಭರಣಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಧರಿಸಬಾರದು. ಹಿಜಾಬ್ ಧರಿಸಿದಲ್ಲಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಆಗಮಿಸಿ ತಪಾಸಣೆಗೆ ಒಳಪಟ್ಟು, ನಂತರ ಪರೀಕ್ಷಾ ಕೊಠಡಿ ತೆರಳಬೇಕು. ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳು, ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಹಾಗೂ ಲಾಗ್ ಟೇಬಲ್ ತರುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗಡೆ ಆಹಾರ ಸೇವನೆಗೆ ಅವಕಾಶವಿಲ್ಲ. ಈ ಎಲ್ಲಾ ನಿಯಮಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಗಮನಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ನೇಮಿಸುವಂತೆ ತಿಳಿಸಿದರು. ಪರೀಕ್ಷಾ ಕಾರ್ಯದಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಪೊಲೀಸ್ ಬಂಧನಕ್ಕೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಪರೀಕ್ಷಾ ಕೇಂದ್ರ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷೆ ಸಂಬಂಧ ಸೂಕ್ತ ತರಬೇತಿ ನೀಡಲಾಗಿದೆ. ಪ್ರತಿ ಕೊಠಡಿಯಲ್ಲೂ 24 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂಧ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ತಿಳಿಸಿದರು. ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ಖಜಾನಾಧಿಕಾರಿ ರಮೇಶ್, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಐದು ಮಾರ್ಗಾಧಿಕಾರಿಗಳ ತಂಡ: ಸುಗಮ ರೀತಿಯಲ್ಲಿ ಪರೀಕ್ಷಾ ಕಾರ್ಯ ನಡೆಸುವಲ್ಲಿ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ 5 ಮಾರ್ಗಾಧಿಕಾರಿಗಳ ತಂಡ ನೇಮಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ 2 ಮಾರ್ಗಾಧಿಕಾರಿ ತಂಡಗಳನ್ನು ನೇಮಿಸಲಾಗುವುದು. ಈಗಾಗಲೇ ಪರೀಕ್ಷಾ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ವಿವರ ಹಾಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ತ್ರಿ ಸದಸ್ಯ ಸಮಿತಿ ನೇತೃತ್ವದಲ್ಲಿಯೇ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.