ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ/ಗೋಕಾಕ
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸೋಮವಾರ ಗೋಕಾಕ ನಗರದ ಪ್ರವಾಹ ಬಾಧಿತ ಪ್ರದೇಶಗಳು ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸಚಿವ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ ₹37,500 ಪರಿಹಾರ ನೀಡಲಾಗುತ್ತಿದೆ.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೆ ₹ 1.20 ಲಕ್ಷ ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಭಾಗಶಃ ಹಾನಿಗೀಡಾದ ಮನೆಗಳಿಗೆ ₹ 6500 ಪರಿಹಾರ ನೀಡಬೇಕಿದೆ. ಆದರೆ, ಹಾನಿಯಾದವರಿಗೆ ತೊಂದರೆಯಾಗಬಾರದೆಂದು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹43,500 ₹ 50 ಸಾವಿರ ಪರಿಹಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡ ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಯಾದ ಎಲ್ಲರಿಗೂ ಆದಷ್ಟು ಬೇಗ ಪರಿಹಾರ ಒದಗಿಸಲಿದ್ದೇವೆ ಎಂದರು.
ಜಿಲ್ಲೆಯಲ್ಲಿ 41,706 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ, 372 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್ ಕಂಬ ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ. ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿ ಪಡೆಯಲಾಗುವುದು ಎಂದು ಹೇಳಿದರು.ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ₹ 48 ಕೋಟಿ ಅನುದಾನ ಲಭ್ಯವಿದ್ದು, ತಹಸೀಲ್ದಾರ್ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಣ ದುರ್ಬಳಕೆ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ:ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಬಿಡುಗಡೆಯಾಗಿರುವ ಹಣವನ್ನು ಅಧಿಕಾರಿಗಳು ದುರ್ಬಳಕೆ ಮಾಡಿರುವುದು ಕಂಡುಬಂದರೆ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹೆಸ್ಕಾಂ ಅಧಿಕಾರಿಗಳಿಗೆ ತರಾಟೆ:ನಗರದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರು ವಾಸವಿರುವ ಕೋಣೆಯಲ್ಲಿ ಸರಿಯಾಗಿ ಬೆಳಕಿನ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಸ್ಥಳದಲ್ಲಿದ್ದ ಹೆಸ್ಕಾಂನ ಉನ್ನತ ಅಧಿಕಾರಿಗಳನ್ನು ಕರೆದು ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ಸಿಎಂ ವಾಹನಕ್ಕೆ ಅಡ್ಡ ಬಂದ ಗೂಳಿ:
ಗೋಕಾಕ ನಗರದ ಹಳೆ ದನಗಳ ಪೇಟೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಹಿಂದಿರುವ ಸಮಯದಲ್ಲಿ ವಾಹನಗಳ ಶಬ್ದಕ್ಕೆ ಬೆದರಿದ ಗೂಳಿಯೊಂದು ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ಅಡ್ಡಬಂದು ವಾಹನಕ್ಕೆ ಅಪ್ಪಳಿಸುವುದು ಸ್ವಲ್ಪದರಲ್ಲಿ ತಪ್ಪಿತು.ಜಿಲ್ಲೆ ವಿಭಜನೆಗೆ ಹಣದ ಕೊರತೆ ಇಲ್ಲ:
ಜಿಲ್ಲೆ ವಿಭಜನೆ ಮಾಡಿದರೆ ದುಡ್ಡು ಹಂಚಿಕೆಯಲ್ಲಿ ತೊಂದರೆ ಆಗುವುದಿಲ್ಲವೇ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಬಳಿ ದುಡ್ಡು ಸಾಕಷ್ಟಿದೆ. ಯಾವುದೇ ತೊಂದರೆ ಆಗುವುದಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಅವರ ಖಾತೆಯಲ್ಲಿ ₹8 ಕೋಟಿ ಹಣ ಇದೆ. ಆದ್ಯತೆ ಮೆರೆಗೆ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ , ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಇದ್ದರು.