ನೀರು ಪೂರೈಕೆಗೆ ಕ್ರಮ ಕೈಗೊಳ್ಳಲು ಸೂಚನೆ

| Published : Feb 14 2024, 02:17 AM IST

ಸಾರಾಂಶ

ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನಯಡಿ ಹಲವು ಹಳ್ಳಿಗಳಲ್ಲಿ ರಸ್ತೆಗಳು ಅಗೆದು ಈಗಲೇ ಕೈಗೊಂಡಿರುವ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಬರಗಾಲದ ಹಿನ್ನೆಲೆಯಲ್ಲಿ ಬೇಸಿಗೆಗೂ ಮೊದಲೇ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಈಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ತಾಲೂಕಿನ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸುವಂತೆ ತಾಲೂಕು ನೋಡಲ್ ಅಧಿಕಾರಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಹೇಳಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೇ ಅವರ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ಪರಿಹಾರ ಒದಗಿಸಬೇಕೆಂದು ತಾಕೀತು ಮಾಡಿದರು.ಎಸ್ಸೆಸ್ಸೆಲ್ಸಿ ಸಾಧನೆ ಮಾಡಬೇಕು

ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕು ಶೇ.100 ರಷ್ಟು ಸಾಧನೆ ಮಾಡಬೇಕು, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಬೇಕು, ವಿಶೇಷ ತರಗತಿಗಳನ್ನು ಕೈಗೊಂಡು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದ ಅವರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಪರೀಕ್ಷೆ ಸುಧಾರಣೆಗೆ ಹೆಚ್ಚು ನಿಗಾ ವಹಿಸಬೇಕೆಂದು ಸೂಚಿಸಿದರು. .

ತಾಪಂ ಇಓ ಮುನಿರಾಜು ಮಾತನಾಡಿ, ತಾಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನಯಡಿ ಹಲವು ಹಳ್ಳಿಗಳಲ್ಲಿ ರಸ್ತೆಗಳು ಅಗೆದು ಈಗಲೇ ಕೈಗೊಂಡಿರುವ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಅಧಿಕಾರಿ ಆದಿನಾರಾಯಣಪ್ಪ ರವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.